Saturday, September 14, 2024
Homeರಾಜ್ಯಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಬಲವಾಗಿ ಸಮರ್ಥಿಸಿಕೊಂಡ ರಾಜ್ಯಪಾಲರು

ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಬಲವಾಗಿ ಸಮರ್ಥಿಸಿಕೊಂಡ ರಾಜ್ಯಪಾಲರು

ಬೆಂಗಳೂರು,ಆ.17– ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರು ಹಲವು ಗಂಭೀರ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ತಾವು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಏಕೆ ಅನುಮತಿ ನೀಡುತ್ತಿದ್ದೇನೆ ಎಂಬುದನ್ನು ಬಲವಾಗಿ ಸಮರ್ಥಿಸಿಕೊಂಡಿರುವ ರಾಜ್ಯಪಾಲರು ಕೆಲವು ಮೂಲಭೂತ ಪ್ರಶ್ನೆಗಳನ್ನು ಸಹ ಹಾಕಿದ್ದಾರೆ.

ಸಿಎಂ ಕುಟುಂಬದ ಪ್ರಭಾವದ ಎರಡು ಅಂಶಗಳನ್ನು ರಾಜ್ಯಪಾಲರು ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ, ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರಭಾವದ ಬಗ್ಗೆ ಉಲ್ಲೇಖವಾಗಿದೆ. ಸಿದ್ದರಾಮಯ್ಯ ಸಿಎಂ ಆಗುವ ತನಕ ಪಾರ್ವತಿ ಕಾದು, ಆ ಬಳಿಕ ಅರ್ಜಿ ಹಾಕಿದ್ದಾರೆ.

2010 ರಲ್ಲಿ ಪಾರ್ವತಿ ಜಮೀನು ಮಾಲೀಕರಾದರೂ ಪರಿಹಾರಕ್ಕೆ ಅರ್ಜಿ ಹಾಕಲು 4 ವರ್ಷ ಕಾಯುತ್ತಾರೆ. ಸಿದ್ದರಾಮಯ್ಯ ಸಿಎಂ ಆದ ಮೇಲೆ 40:60 ಸೈಟ್ ಪರಿಹಾರ ಅನುಪಾತ, 50:50 ಆಯ್ತು. ಪಾಲಿಸಿ ಬದಲಾವಣೆಗೆ ಆಗಿನ ಸಿದ್ದರಾಮಯ್ಯ ಕ್ಯಾಬಿನೆಟ್ ಅನುಮತಿ ನೀಡಿತ್ತು. ಸಿದ್ದರಾಮಯ್ಯ ಪತ್ನಿ ಕೊಟ್ಟ ಅರ್ಜಿಯ ಆಧಾರದ ಮೇಲೆ ಪಾಲಿಸಿ ಬದಲಾವಣೆ ಮಾಡಿದರು. ಆ ನಂತರ ಪರಿಹಾರ ನೀಡುವ ಸಂಬಂಧ ನಡೆದ ಮುಡಾ ಸಭೆಯಲ್ಲಿ ಶಾಸಕರಾಗಿದ್ದ ಯತೀಂದ್ರ ಇದ್ದರು ಎಂದು ಪ್ರಭಾವದ ಬಗ್ಗೆ ಉಲ್ಲೇಖಿಸಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ತನಿಖೆಗೆ ಅನುಮತಿ ನೀಡಿರುವ ಆದೇಶದಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿಯವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪ್ರದೀಪ್ ಕುಮಾರ್ ಎಸ್.ಪಿ., ಟಿ.ಜೆ. ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ಆರು ಪುಟಗಳ ಆದೇಶವನ್ನು ರಾಜ್ಯಪಾಲರು ಹೊರಡಿಸಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಸೆಕ್ಷನ್ 218ರ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವುದಾಗಿ ಶುಕ್ರವಾರ ಸಹಿ ಮಾಡಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿಯವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ದೂರುಗಳು, ಕಾನೂನು ತಜ್ಞರ ಅಭಿಪ್ರಾಯ ಮತ್ತು ಸಂಪುಟದ ನಿರ್ಣಯವನ್ನು ಪರಿಶೀಲಿಸಲಾಗಿದೆ. ಮುಖ್ಯಮಂತ್ರಿಯವರ ವಿರುದ್ಧದ ಆರೋಪಗಳ ವಿಚಾರದಲ್ಲಿ ಎರಡು ಬಗೆಯ ಅಭಿಪ್ರಾಯಗಳಿವೆ. ದೂರಿನಲ್ಲಿರುವ ಆರೋಪಗಳನ್ನು ಮೇಲ್ನೋಟಕ್ಕೆ ಪುಷ್ಟೀಕರಿಸುವ ದಾಖಲೆಗಳೂ ಇವೆ, ಆದ್ದರಿಂದ ಸಿದ್ದರಾಮಯ್ಯ ಅವರ ವಿರುದ್ಧದ ಆರೋಪಗಳ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವ ಅಗತ್ಯವಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಮುಖ್ಯಮಂತ್ರಿಯವರ ವಿರುದ್ಧದ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ಮೂರು ಅರ್ಜಿಗಳು ಸಲ್ಲಿಕೆಯಾಗಿದ್ದವು. ಜುಲೈ 26ರಂದು ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ ವಿವರಣೆ ಕೇಳಲಾಗಿತ್ತು. ಆ.1ರಂದು ಸಂಪುಟದ ನಿರ್ಣಯವು ತಮ ಕಚೇರಿಗೆ ತಲುಪಿತು. ಆ.3ರಂದು ಮುಖ್ಯಮಂತ್ರಿಯವರ ಪ್ರತಿಕ್ರಿಯೆ ತಲುಪಿತು. ಅದರೊಂದಿಗೆ ಕೆಲವು ದಾಖಲೆಗಳನ್ನೂ ಸಲ್ಲಿಸಲಾಗಿತ್ತು ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಮುಡಾದಲ್ಲಿನ ಅಕ್ರಮಗಳ ಕುರಿತು ಐಎಎಸ್ ಅಧಿಕಾರಿ ವೆಂಕಟಾಚಲಪತಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆ ಬಳಿಕ ಏಕಸದಸ್ಯ ಆಯೋಗವನ್ನು ನೇಮಿಸಲಾಗಿದೆ, ಯಾರ ವಿರುದ್ಧ ಆರೋಪಗಳು ಕೇಳಿಬಂದಿವೆಯೋ ಅದೇ ವ್ಯಕ್ತಿ ತನಿಖೆ ಹೇಗಿರಬೇಕು ಎಂಬುದನ್ನು ನಿರ್ಧರಿಸುವುದು ಕಾನೂನು ಸಮತವಲ್ಲ. ಆದ್ದರಿಂದ ಸಂಪುಟದ ನಿರ್ಧಾರವು ಕಾನೂನುಬಾಹಿರ ಎಂದು ಗೆಹ್ಲೋಟ್ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಮುಖ್ಯ ಕಾರ್ಯದರ್ಶಿಯವರು ಆ.1ರಂದು ಸಂಪುಟ ಸಭೆ ಕರೆದಿದ್ದರು. ಅಲ್ಲಿ ತಾವು ನೀಡಿದ್ದ ಶೋಕಾಸ್ ನೋಟೀಸ್ ಅನ್ನು ಮಂಡಿಸಿ ಚರ್ಚಿಸಲಾಗಿದೆ. ವಿಚಾರಣೆಗೆ ಅನುಮತಿ ಕೋರಿರುವ ಅರ್ಜಿಗಳನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡುವ ನಿರ್ಣಯವನ್ನು ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಅವರ ಸಲಹೆಯಂತೆ ರಚನೆಯಾದ ಸಂಪುಟವು ಅವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ದೂರುಗಳನ್ನು ತಿರಸ್ಕರಿಸುವಂತೆ ಸಲಹೆ ನೀಡುವ ನಿರ್ಣಯ ಕೈಗೊಂಡಿದೆ. ಈ ನಿರ್ಣಯವು ವಿಶ್ವಾಸಾರ್ಹವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶ ವಿಶೇಷ ಪೊಲೀಸ್ ಘಟಕ ಮತ್ತು ಮಧ್ಯಪ್ರದೇಶ ಸರ್ಕಾರದ ನಡುವಿನ ವ್ಯಾಜ್ಯದಲ್ಲಿ ಸುಪ್ರೀಂ ಕೋರ್ಟ್ 2004ರಲ್ಲಿ ನೀಡಿದ್ದ ತೀರ್ಪನ್ನು ತಮ ಆದೇಶದಲ್ಲಿ ಉಲ್ಲೇಖಿಸಿರುವ ರಾಜ್ಯಪಾಲರು, ಕೆಲವು ವಿಶೇಷ ಸಂದರ್ಭಗಳಲ್ಲಿ ಸಂಪುಟದ ಸಲಹೆಯನ್ನು ಸ್ವೀಕರಿಸುವುದು ರಾಜ್ಯಪಾಲರ ವಿವೇಚನೆಗೆ ಬಿಟ್ಟದ್ದು ಎಂದಿದ್ದಾರೆ.

ಇಂತಹ ಪ್ರಕರಣಗಳಲ್ಲಿ ದಾಖಲೆಗಳು ಲಭ್ಯವಿದ್ದಾಗಲೂ ರಾಜ್ಯಪಾಲರು ವಿವೇಚನಾ ಅಧಿಕಾರ ಬಳಸಲು ಅವಕಾಶ ನೀಡದೆ ಸರ್ಕಾರಕ್ಕೆ ಅನುಮತಿ ನಿರಾಕರಿಸುವ ಅಧಿಕಾರ ನೀಡಿದಲ್ಲಿ ಕಾನೂನಿನ ಆಡಳಿತವು ಕುಸಿದುಬೀಳುತ್ತದೆ. ಅಧಿಕಾರದಲ್ಲಿರುವ ಪ್ರಭಾವಿ ವ್ಯಕ್ತಿಗಳ ವಿರುದ್ಧ ಮೇಲ್ನೋಟಕ್ಕೆ ಸಾಕ್ಷ್ಯಗಳು ಲಭ್ಯವಿದ್ದಾಗಲೂ ತನಿಖೆಗೆ ಅನುಮತಿ ನಿರಾಕರಿಸಿದರೆ ಅದರಿಂದ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುತ್ತದೆ. ತಮ ವಿರುದ್ಧ ತನಿಖೆ ನಡೆಸಲು ಅವಕಾಶವೇ ಇಲ್ಲ ಎಂಬ ಭಾವನೆಯಿಂದ ಅಧಿಕಾರದಲ್ಲಿರುವ ವ್ಯಕ್ತಿಗಳು ಕಾನೂನು ಉಲ್ಲಂಸಲು ಪ್ರೀರಣೆ ದೊರೆಯುತ್ತದೆ ಎಂದು ಸುಪ್ರೀಂ ಕೋರ್ಟ್ 2004ರ ತೀರ್ಪಿನಲ್ಲಿ ಹೇಳಿದ್ದನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

RELATED ARTICLES

Latest News