ಪಂಚಾಯ್ತಿ ಅಧಿಕಾರ ಕಡಿತಗೊಳಿಸಲ್ಲ: ಸಿಎಂ ಸ್ಪಷ್ಟನೆ

Social Share

ಬೆಂಗಳೂರು, ಅ.11- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರನ್ನು ಭೇಟಿಯಾಗಿ, ಅಧಿಕಾರವನ್ನು ಕಡಿತಗೊಳಿಸುವ ವಿಚಾರದ ಪ್ರಸ್ತಾವನೆ ವಿರುದ್ಧ ಪಂಚಾಯತ್ ಜನಪ್ರತಿನಿಧಿಗಳ ಆತಂಕವನ್ನು ಗಮನಕ್ಕೆ ತಂದರು.

ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಯವರು, ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅನಿಯಮಗಳಿಗೆ ತಿದ್ದುಪಡಿ ತರುವ ಯಾವುದೇ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ ಎಂದರು.

ಗ್ರಾಮ ಪಂಚಾಯತ್ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಹೇಳಿದರು.
ಗ್ರಾಮ ಪಂಚಾಯತಿ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಅಧಿಕಾರ ವಿಕೇಂದ್ರಿಕರಣ ಗೊಳಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ಬದ್ಧತೆಯಿಂದ ಕೂಡಿದೆ ಎಂದು ಸಚಿವರು ತಿಳಿಸಿದರು.

ಗ್ರಾಮ ಪಂಚಾಯಿತಿಯ ನೌಕರರ ಸೇವಾ ನಿಯಮಾವಳಿಗಳಿಗೆ ತಿದ್ದುಪಡಿ ತಂದು, ಪಂಚಾಯತ್ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವ ವರದಿಗಳನ್ನು ತಿರಸ್ಕರಿಸುವ ಮೂಲಕ ಮುಖ್ಯಮಂತ್ರಿಗಳು ತೆರೆ ಎಳೆದಿದ್ದಾರೆ ಎಂದೂ ಸಚಿವರು ಹೇಳಿದ್ದಾರೆ.

Articles You Might Like

Share This Article