ಬೆಳಗಾವಿ,ಮಾ.23- ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣವನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಕಂತುಗಳ ಹಣವನ್ನು ಈ ತಿಂಗಳ ಅಂತ್ಯದ ನಂತರ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2 ಸಾವಿರ ಹೆಚ್ಚಿಸಲಾಗಿತ್ತು. ಆನಂತರ ಬಂದ ಸರ್ಕಾರಗಳು ಗೌರವ ಧನ ಹೆಚ್ಚಳ ಮಾಡಲಿಲ್ಲ. ಅಂಗನವಾಡಿ ಕಾರ್ಯಕರ್ತರ ಗೌರವ ಧನವನ್ನು 750 ರೂ. ಹಾಗೂ ಸಹಾಯಕರ ಗೌರವಧನವನ್ನು 500 ರೂ. ಹೆಚ್ಚಿಸುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದು, ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಯತ್ನ ನಡೆಸಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಂತ್ರಿಯೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಪ್ರಯತ್ನಿಸಿರುವುದು ದುರದೃಷ್ಟಕರ ಸಂಗತಿ.
ವಿಧಾನಸಭೆ ಅಧಿವೇಶನದಲ್ಲಿ ರಾಜಣ್ಣ ಅವರು ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ. ಉಪಮುಖ್ಯಮಂತ್ರಿಯವರು ಈ ವಿಷಯದ ಬಗ್ಗೆ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ. ಗೃಹಸಚಿವರು ಈ ವಿಚಾರದಲ್ಲಿ ತನಿಖೆ ನಡೆಸುವ ಭರವಸೆ ನೀಡಿದ್ದು, ತಾವು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.