ಲಿಂಗಾಯಿತರ ಮನವೊಲಿಕೆಗೆ ಹೊಸ ಅಸ್ತ್ರ ಪ್ರಯೋಗಕ್ಕೆ ಮುಂದಾದ ಸಿಎಂ..!

Spread the love

ಬೆಂಗಳೂರು,ಅ.15- ಈಗಾಗಲೇ ಭದ್ರಯಾಗಿರುವ ವೀರಶೈವ ಸಮುದಾಯದ ಮತದಾರರನ್ನು ಇನ್ನಷ್ಟು ಭದ್ರಪಡಿಸಿಕೊಳ್ಳಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಿಂಗಾಯಿತ ಅಸ್ತ್ರ ಬಳಸಲು ಮುಂದಾಗಿದ್ದಾರೆ.

ಕಲ್ಯಾಣ ಕರ್ನಾಟಕದ ಪ್ರಮುಖ ಕೇಂದ್ರವಾದ ಕಲ್ಬುರ್ಗಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ 12ನೇ ಶತಮಾನದ ಕಾಯಕ ಯೋಗಿ ಬಸವಣ್ಣನವರ ಹೆಸರನ್ನು ನಾಮಕರಣ ಮಾಡುವಂತೆ ಬಿಎಸ್‍ವೈ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಮಾನವ ಸಂಪನ್ಮೂಲ ಇಲಾಖೆಗೆ ಪತ್ರ ಬರೆದಿರುವ ಯಡಿಯೂರಪ್ಪ ಕಲ್ಬುರ್ಗಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಕಾಯಕಯೋಗಿ ಬಸವಣ್ಣನವರ ಹೆಸರನ್ನು ನಾಮಕರಣ ಮಾಡುವಂತೆ ಕೋರಿದ್ದಾರೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕಾರ ಅವಧಿಯಲ್ಲಿ ಕಲ್ಬುರ್ಗಿ ವಿಶ್ವವಿದ್ಯಾನಿಲಯಕ್ಕೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿಡುವಂತೆ ಶಿಫಾರಸ್ಸು ಮಾಡಿದ್ದರು.

ಆದರೆ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಪುರಸ್ಕಾರವೂ ಮಾಡಿರಲಿಲ್ಲ. ತಿರಸ್ಕರಿಸಿಯೂ ಇರಲಿಲ್ಲ. ಇದೀಗ ಕಲ್ಬುರ್ಗಿ ವಿಶ್ವವಿದ್ಯಾನಿಲಯಕ್ಕೆ ಬಸವಣ್ಣನವರ ಹೆಸರಿಡಲು ಮುಖ್ಯಮಂತ್ರಿ ಯಡಿಯೂರಪ್ಪ ಪತ್ರ ಬರೆದಿರುವುದು ಮಹತ್ವ ಪಡೆದುಕೊಂಡಿದೆ.

# ರಾಜಕೀಯ ಲೆಕ್ಕಾಚಾರ:
ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳಲ್ಲಿ ಲಿಂಗಾಯಿತ ಮತಗಳು ನಿರ್ಣಾಯಕವಾಗಿವೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ ಕಲ್ಬುರ್ಗಿ, ಬೀದರ್, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳು ಸಂಪೂರ್ಣವಾಗಿ ಬಿಜೆಪಿಮಯವಾಗಿದ್ದವು.

ಆದರೆ 2018ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಹೇಳಿಕೊಳ್ಳುವಂತಹ ಸ್ಥಾನಗಳು ಬಂದಿರಲಿಲ್ಲ. ಇದೀಗ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದು ಹಾಗೂ ಆ ಸಮುದಾಯದ ಪ್ರಶ್ನಾತೀತ ನಾಯಕನಾಗಿರುವ ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವುದರಿಂದ ಮತಗಳನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಕಲ್ಬುರ್ಗಿಯಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಬಸವಣ್ಣ ಹಾಗೂ ಇಲ್ಲಿನ ನೂತನ ವಿಮಾನ ನಿಲ್ದಾಣಕ್ಕೆ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಹೆಸರನ್ನು ನಾಮಕ ಮಾಡುವ ಸಾಧ್ಯತೆ ಇದೆ.
ವಿಶ್ವವಿದ್ಯಾಲಯಗಳು ಸ್ವಾಯತ್ತ ಸಂಸ್ಥೆಯಾಗಿರುವುದರಿಂದ ನಾಮಕರಣ ಮಾಡಬೇಕಾದರೆ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯ. ರಾಜ್ಯ ಸರ್ಕಾರ ಈಗಾಗಲೇ ಪ್ರಸ್ತಾವನೆ ಮಾಡಿರುವುದರಿಂದ ಶೀಘ್ರದಲ್ಲೇ ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮುಂದಿನ ದಿನಗಳಲ್ಲಿ ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಏಕೆಂದರೆ ಕಾಂಗ್ರೆಸ್ ಅವಧಿಯಲ್ಲೇ ಇದೇ ವಿವಿಗೆ ಅಂಬೇಡ್ಕರ್ ಹೆಸರಿಡಲು ಶಿಫಾರಸ್ಸು ಮಾಡಲಾಗಿತ್ತು. ಅದನ್ನು ತಿರಸ್ಕರಿಸಿ ಬಸವಣ್ಣನವರ ಹೆಸರಿಟ್ಟರೆ ಪ್ರತಿ ಪಕ್ಷ ಇದನ್ನೇ ರಾಜಕೀಯ ಅಸ್ತ್ರವಾಗಿ ಬಳಸಿಕೊಂಡು ಬಿಜೆಪಿ ವಿರುದ್ಧ ತಿರುಗಿಬೀಳುವ ಸಾಧ್ಯತೆ ಹೆಚ್ಚಾಗಿದೆ.

Facebook Comments

Sri Raghav

Admin