ಕಾರ್ಯಕ್ರಮಕ್ಕೆ ದೇವೇಗೌಡರಿಗಿಲ್ಲ ಆಹ್ವಾನ, ಜೆಡಿಎಸ್ ಆಕ್ರೋಶ

Social Share

ಬೆಂಗಳೂರು, ನ.11- ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಕನ್ನಡ ನೆಲದಿಂದ ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗರಾದ ಎಚ್.ಡಿ.ದೇವೇಗೌಡ ಅವರನ್ನು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್ ಆರೋಪಿಸಿದೆ.

ಈ ಸಂಬಂಧ ಸರಣಿ ಟ್ವಿಟ್ ಮಾಡಿರುವ ಜೆಡಿಎಸ್, ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರ್ಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಗೌಡರನ್ನು ಆಹ್ವಾನ ಮಾಡಲಿಲ್ಲ ಏಕೆ ಎಂದು ಪ್ರಶ್ನಿಸಿದೆ.

ಕುಲ ಕುಲವೆಂದು ಹೊಡೆದಾಡದಿರಿ : ಮೋದಿ ಭಾಷಣದ ಹೈಲೈಟ್ಸ್

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ ಎಂದಿದೆ.

ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ ಎಂದಿದೆ.

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ.
ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ ಎಂದು ವಾಗ್ದಾಳಿ ನಡೆಸಿದೆ.

ಕೆಂಪೇಗೌಡರ ಚಿಂತನೆಯಂತೆಯೇ ಬೆಂಗಳೂರು ನಗರ ನಿರ್ಮಾಣ : ಸಿಎಂ

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರ್ಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯವಿಲ್ಲ. ದೇವೇಗೌಡರ ಬಗ್ಗೆ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ಬಿಜೆಪಿ ನಾಯಕರು ವರ್ತಿಸಿದ್ದಾರೆ ಎಂದು ಟೀಕಿಸಿದೆ.

ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಸರ್ಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ವಾಗ್ದಾಳಿ ನಡೆಸಿದೆ.

Articles You Might Like

Share This Article