ಬೆಂಗಳೂರು,ಆ.27– ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ಕಿಡಿ ಹೊತ್ತಿಸಿದ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.
ಎಸ್.ಆರ್.ವಿಶ್ವನಾಥ್ ಅವರು ತಮ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಅತ್ತ ಎಚ್.ವಿಶ್ವನಾಥ್ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ದ ಡಿ.ಕೆ.ಶಿವಕುಮಾರ್ ಮನೆಯ ಎದುರೇ ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದೆ ಮುಡಾದಲ್ಲಿ ನಿವೇಶನ ಹಂಚಿಕೆಗೆ ಸಂಬಂಧಪಟ್ಟಂತೆ ಕಳೆದ ಎರಡು ವರ್ಷಗಳ ಹಿಂದಿನ ಪ್ರಕರಣವನ್ನು ಎಚ್.ವಿಶ್ವನಾಥ್ ಕೆದಕಿದರು. ಲೋಕಸಭೆ ಚುನಾವಣೆಗೂ ಮುನ್ನ ಎಚ್.ವಿಶ್ವನಾಥ್ ಬಿಜೆಪಿ ಮುಖಂಡರ ವಿರುದ್ಧವೇ ಕೆಂಡಕಾರಿ ಕಾಂಗ್ರೆಸ್ ನಾಯಕರ ಪರವಾಗಿ ಮಾತನಾಡಿದ್ದರು. ಆ ಸಂದರ್ಭದಲ್ಲಿ ವಿಶ್ವನಾಥ್ ಮರಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಹರಡಿದ್ದವು.
ಆದರೆ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಇದ್ದಕ್ಕಿದ್ದಂಗೆ ಕಾಂಗ್ರೆಸ್ ನಾಯಕರ ವಿರುದ್ಧವೇ ವಿಶ್ವನಾಥ್ ತಿರುಗಿ ಬಿದ್ದಿದ್ದರು. ಮುಡಾದಲ್ಲಿ ನಿವೇಶನ ಹಂಚಿಕೆಯ ಸಂಬಂಧಪಟ್ಟಂತೆ ಅಕ್ರಮಗಳಾಗಿವೆ ಎಂದು ದೂರಿದ್ದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಟೀಕೆ ಮಾಡಿದ್ದರು.
ಆನಂತರ ಇದು ಕಾವೇರಿದ ಚರ್ಚೆಗೆ ಗ್ರಾಸವಾಗಿದ್ದಲ್ಲದೆ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಿದವು. ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ ಬಳಿಕ ಮತ್ತಷ್ಟು ಉಲ್ಭಣ ವಾತಾವರಣ ನಿರ್ಮಾಣವಾಗಿತ್ತು.