“ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ವಾಪಸ್ ಪಡೆಯಬೇಕು”

ಬೆಂಗಳೂರು, ಜು.28-ಕರ್ನಾಟಕ ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಯು ರೈತರಿಗೆ ಮಾರಕವಾಗಿದ್ದು, ಕೂಡಲೇ ವಾಪಸ್ಸು ಪಡೆಯಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಭೂಸುಧಾರಣೆ ಕಾಯಿದೆ 1961 ಸೆಕ್ಷನ್ 79 ಎ, 79 ಬಿ, 79 ಸಿ ಗಳನ್ನು ತಿದ್ದುಪಡಿ ಹಾಗೂ ಕರ್ನಾಟಕ ಕೃಷಿ ಉತ್ಪನ್ಮ ಮಾರುಕಟ್ಟೆ ಸಮಿತಿ 1966 ಕ್ಕೆ ಮಾಡಿರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು ಒತ್ತಾಯಿಸಿದರು.

ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿನ ಬಿಜೆಪಿ ಸರ್ಕಾರ ರೈತರ, ಕಾರ್ಮಿಕರ ವಿರೋಧಿ ತಿದ್ದುಪಡಿ ಗಳನ್ನು ತಂದು ಸುಗ್ರೀವಾಜ್ಞೆ ಮೂಲಕ ರೈತರನ್ನು ಮತ್ತು ಕಾರ್ಮಿಕರನ್ನು ಬೀದಿ ಪಾಲು ಮಾಡಿದೆ ಎಂದು ದೇವೇಗೌಡರು ಆರೋಪಿಸಿದರು.ಎಪಿಎಂಸಿ ಕಾಯ್ದೆ ತಿದ್ದುಪಡಿಯೂ ಮಾರಕವಾಗಿದೆ.

ಸರ್ಕಾರ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಜ ರೈತ ವಿರೋಧಿ ನೀತಿ ಅನುಸರಿಸಿದ್ದು, ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಬಹುಮತ ಇದೆ ಎಂದು ಏನು ಬೇಕಾದರೂ ಮಾಡಬಹುದು ಅನ್ನುವ ಮನಸ್ಥಿತಿಯಲ್ಲಿ ಸರ್ಕಾರವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ತಿದ್ದುಪಡಿ ಕಾಯ್ದೆ ವಾಪಸ್ಸು ಪಡೆಯುವಂತೆ ಕೋರಿರುವುದಾಗಿ ತಿಳಿಸಿದರು.ಕಾಯ್ದೆಗೆ ತಿದ್ದುಪಡಿ ತರುವ ಮುನ್ನ ವಿರೋಧ ಪಕ್ಷಗಳ ಜೊತೆ ಚರ್ಚೆ ಮಾಡಬೇಕಿತ್ತು ಎಂದ ಅವರು, ಸರ್ಕಾರದ ನೀತಿ ವಿರುದ್ಧ ನಾವು ಹೋರಾಟ ಮಾಡುತ್ತೇವೆ.

ರಾಜ್ಯಾದ್ಯಂತ ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ. ಸರ್ಕಾರ ರೈತ ವಿರೋಧಿ ನೀತಿ ತಂದಿದ್ದಾರೆ. ಇದರ ವಿರುದ್ಧ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ಮಾಡುತ್ತೇವೆ ಎಂದರು.ಕೊರೊನಾ ಕಾರಣ ನಾನು ಮಾತನಾಡಲು ಆಗಿಲ್ಲ. ಸರ್ಕಾರದ ನಿಯಮ ಉಲ್ಲಂಘಿಸಬಾರದು ಅಂತ ಹಿಂದೆ ಸರಿದಿದ್ದೆ.

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಕಾಯ್ದೆ ಪರಿಣಾಮ ಏನಾಗಲಿದೆ. ಈ ಬಗ್ಗೆ ಸರ್ಕಾರ ಮಾಹಿತಿ ನೀಡದೆ ಕಾಯ್ದೆ ಜಾರಿ ಮಾಡಿದೆ. ರಿಯಲ್ ಎಸ್ಟೇಟ್ ಮಾಫಿಯಾಗೆ ಅನುಕೂಲ ಆಗಲಿದೆ.ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲೂ ಮಾಫಿಯಾ ನಡೆಯುತ್ತದೆ. ಮಾಫಿಯಾಗೆ ಅನುಕೂಲ ಮಾಡಿಕೊಡುತ್ತದೆ .ಇದು ಅತ್ಯಂತ ಕೆಟ್ಟ ತಿದ್ದುಪಡಿ ಕಾಯ್ದೆ ಎಂದರು‌.

ಯಾರೋ ಕೈಗಾರಿಕೋದ್ಯಮಿ ಬಂದು ಭೂಮಿ ಪಡೆಯುತ್ತಾರೆ. ಕೈಗಾರಿಕೆ ಉದ್ದೇಶಕ್ಕಾಗಿ ಪಡೆದ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು. 7 ವರ್ಷಗಳ ನಂತರ ಅದೇ ಭೂಮಿಯನ್ನು ಪರಾಭಾರೆ ಮಾಡಬಹುದು. 7 ವರ್ಷಗಳ ನಂತರ ಅಂದಿನ ಬೆಲೆಗೆ ಮಾರಾಟ ಮಾಡುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

Sri Raghav

Admin