ಬಿಜೆಪಿ ಸರ್ಕಾರದ 1 ವರ್ಷದ ಸಾಧನೆ ಕುರಿತು ಕುಮಾರಸ್ವಾಮಿ ವ್ಯಂಗ್ಯ

Social Share

ಬೆಂಗಳೂರು, ಜು.28- ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರ್ಕಾರದ ವರ್ಷದ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ.

ಸಾವುಗಳನ್ನೇ ಸಾಧನೆಗಳನ್ನಾಗಿ ಮಾಡಿ ಕೊಂಡು, ಅವುಗಳನ್ನೇ ಅಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞಾ ಕಾಡುತ್ತಿಲ್ಲ ಎನ್ನುವ ಸಮಾಧಾನ, ಸರ್ಕಾರ ಮುಖ ಉಳಿಸಿಕೊಂಡಿದೆ ಎಂದು ಲೇವಡಿ ಮಾಡಿದ್ದಾರೆ. ಸರ್ಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ಸಾವಿನಲ್ಲೂ ಸಿಂಪಥಿ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ ಎಂದು ಟೀಕಿಸಿದ್ದಾರೆ.

ಜಾತಿ, ಧರ್ಮ, ಆಚಾರ, ವಿಚಾರ, ಆಹಾರ, ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ ? ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ಮತಕ್ಕಾಗಿ ಕೋಮುಗಳ ಇರಿಯುವುದಾ ಸಾಧನೆ ಎಂದು ಪ್ರಶ್ನಿಸಿದ್ದಾರೆ.

ಸಾಧನೆ ನೆಪದಲ್ಲಿ ನಲಿಯುವ ಮುನ್ನ ಕನಿಷ್ಠ ನಾಚುವ ಸೂಕ್ಷ ್ಮತೆಯೂ ಇಲ್ಲವಲ್ಲ. ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಂದಿರ ಆರ್ತನಾದ ಸರ್ಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯ ಲಾಗದೇ ಈಗ ಕೃತಕ ಸಾಂತ್ವನ ಹೇಳಿದರೇನು ಪ್ರಯೋಜನ ಎಂದಿದ್ದಾರೆ.

ತಾಯಂದಿರ ಆರ್ತನಾದ ಸರ್ಕಾರದ ಕಿವಿಗೆ ಇಂಪಾದ ನಾದದಂತೆ ಕೇಳುತ್ತಿವೆಯಾ? ಬಿಜೆಪಿಯ ಮತಕ್ಕಾಗಿ ಮರಣಮೃದಂಗದ ಆಳ-ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ. ಬಿಜೆಪಿ ಅಧ್ಯಕ್ಷರು ಸೇರಿ ಸಚಿವರಿಬ್ಬರಿಗೆ ಎದುರಾದ ಪ್ರತಿರೋಧವೇ ಜನರ ತಾಳ್ಮೆ ಕಟ್ಟೆಯೊಡೆದಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

Articles You Might Like

Share This Article