ಬೆಂಗಳೂರು,ಜೂ.4- ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎರಡೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಮಂಡ್ಯ ಜೆಡಿಎಸ್‌ನ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರನ್ನು ಪರಾಭವಗೊಳಿಸಿದ್ದಾರೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ ಒಂದು ಕ್ಷೇತ್ರದಲ್ಲಷ್ಟೇ ಜೆಡಿಎಸ್ ಜಯ ಗಳಿಸಿತ್ತು. ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಗಳಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಪ್ರಾಬಲ್ಯ ಮೆರೆದಿತ್ತು.
ಕೇವಲ ಒಂದೇ ವರ್ಷದಲ್ಲಿ ಜನಾದೇಶ ಬದಲಾಗಿದ್ದು, ಕಾಂಗ್ರೆಸ್ ಬದಲಾಗಿ ಜೆಡಿಎಸ್‌ಗೆ ಒಲವು ತೋರಿದ್ದಾರೆ. ತೀವ್ರ ಹಣಾಹಣಿ ಏರ್ಪಟ್ಟಿದ್ದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನ್ನು ಜನರು ಕೈ ಹಿಡಿದಿಲ್ಲ. ಮತ್ತೆ ಜೆಡಿಎಸ್‌ಗೆ ಮನ್ನಣೆ ನೀಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಾಗಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದ್ದವು. ಈ ಕ್ಷೇತ್ರದಲ್ಲಿ ಪಕ್ಷೇತರ ಅ ಭ್ಯರ್ಥಿ ಸುಮಲತಾ ಜಯಗಳಿಸಿದ್ದರು.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಫಲ ನೀಡಿದೆ. ನಿರೀಕ್ಷೆಗೂ ಮೀರಿದ ಬೆಂಬಲ ಎನ್‌ಡಿಎ ಮೈತ್ರಿಕೂಟಕ್ಕೆ ದೊರೆತಿರುವುದು ಇದರಿಂದ ಸಾಬೀತಾದಂತಾಗಿದೆ. ಜೆಡಿಎಸ್‌ನ ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ನಡೆಸಿದ ಸಂಘಟಿತ ಹೋರಾಟ ಫಲ ನೀಡಿದ್ದು, ಜೆಡಿಎಸ್ ಮಂಡ್ಯ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದೆ.