ಬೆಂಗಳೂರು, ಜೂ.15-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಮಾಡುವುದಾಗಿ ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಘೋಷಣೆಯಾಗಲಿ. ಆ ನಂತರ ಅಭ್ಯರ್ಥಿ ಆಯ್ಕೆ ಕುರಿತು ಮಾತನಾಡೋಣ ಎಂದರು.
ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ದೊಡ್ಡವರು, ಅವರು ಏನು ಬೇಕಾದರೂ ಮಾತನಾಡಲಿ ಎಂದು ತಿರುಗೇಟು ನೀಡಿದರು. ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡುವುದಿಲ್ಲ ಎಂಬ ಸುರೇಶ್ ಅವರ ಹೇಳಿಕೆಗೆ ಮೇಲಿನಂತೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಕುಮಾರಸ್ವಾಮಿ ಅವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃದು ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳ ನಡೆಯನ್ನು ಸ್ವಾಗತ ಮಾಡೋಣ ಬಿಡಿ ಎಂದು ಹೇಳಿದರು.
ಲೋಕಸಭೆಗೆ ಆಯ್ಕೆಯಾದ ಮೇಲೆ ಸಂಸತ್ ಸದಸ್ಯ ಸ್ಥಾನ ಇಲ್ಲವೆ ಶಾಸಕ ಸ್ಥಾನ ಎರಡರಲ್ಲಿ ಒಂದು ಮಾತ್ರ ಉಳಿಸಿಕೊಳ್ಳಬೇಕು. ಹೀಗಾಗಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಇಂದು ಸಲ್ಲಿಸಿರುವುದಾಗಿ ಕುಮಾರಸ್ವಾಮಿ ತಿಳಿಸಿದರು.ದಕ್ಷಿಣ ಕನ್ನಡ ಜಿಲ್ಲೆ ಕೈಗಾರಿಕೆಗೆ ಪ್ರೋತ್ಸಾಹ: ದಕ್ಷಿಣ ಕನ್ನಡ ಜಿಲ್ಲೆಯ ಕೈಗಾರಿಕಾ ಯೋಜನೆಗಳಿಗೆ ಪ್ರೋತ್ಸಾಹ ನೀಡುವಂತೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸಲಹೆ ಮಾಡಿದರು.
ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ತಮ ಕಚೇರಿಯಲ್ಲಿ ರಾಜೀನಾಮೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಸಭಾಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದಾರು ಕೈಗಾರಿಕಾ ಯೋಜನೆಗಳಿವೆ. ಅವುಗಳಿಗೆ ನಿಮ ಬೆಂಬಲ ಬೇಕು. ನಿಮಿಂದ ರಾಜ್ಯ ಯೋಜನೆಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ ಎಂದರು.
ಆಗ ಮಾತನಾಡಿದ ಕುಮಾರಸ್ವಾಮಿ ಅವರು, ಕೈಗಾರಿಕೆಗಳಿಗೆ ಸಂಬಂಧಿಸಿದ ಯೋಜನೆಗಳ ಮಾಹಿತಿಯನ್ನು ಗಮನಕ್ಕೆ ತಂದರೆ, ಕೈಲಾದ ಬೆಂಬಲ ನೀಡುವೆ ಎಂದು ಭರವಸೆ ನೀಡಿದ್ದಾರೆ.