ಬೆಂಗಳೂರು, ಮಾ.27-ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎನ್‍ಡಿಎ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಖಚಿತವಾಗಿದ್ದು, ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ. ಮಂಡ್ಯ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡಲಿದ್ದಾರೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ತೀವ್ರವಾಗಿತ್ತು. ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡಬೇಕು ಎಂದು ಮಂಡ್ಯ ಜಿಲ್ಲಾ ಕಾರ್ಯಕರ್ತರು ನಿರಂತರ ಒತ್ತಡ ಹೇರುತ್ತಿದ್ದರು. ಅಲ್ಲದೆ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನಾದರೂ ಮಂಡ್ಯದಿಂದ ಸ್ಪರ್ಧೆಗಿಳಿಸಬೇಕು ಎಂದು ಒತ್ತಾಯಿಸಲಾಗುತ್ತಿತ್ತು.
ಈ ನಡುವೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಬಿಟ್ಟು ಹೋಗಬಾರದು ಹಾಗೂ ಮಂಡ್ಯ ಕ್ಷೇತ್ರದಲ್ಲಿ ಸ್ರ್ಪಧಿಸಬಾರದು ಎಂದು ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು ಆಗ್ರಹಿಸುತ್ತಿದ್ದರು. ಎರಡೂ ಕ್ಷೇತ್ರಗಳ ಪಕ್ಷದ ಮುಖಂಡರ ಸಭೆ ನಡೆಸಿದ ಕುಮಾರಸ್ವಾಮಿ ಅವರು ಕಾರ್ಯಕರ್ತರ ಒತ್ತಡಕ್ಕೆ ಮಣಿದು ಮಂಡ್ಯದಿಂದ ಸ್ರ್ಪಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಮಿತಿ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗಿಳಿಸಲಿರುವ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲಾಗಿದೆ. ನಿರೀಕ್ಷೆಯಂತೆ ಹಾಸನ ಕ್ಷೇತ್ರದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮರು ಸ್ಪರ್ಧೆಗಿಳಿಸಲು ನಿರ್ಧರಿಸಲಾಗಿದೆ.
ಇಂದು ಸಂಜೆ ವೇಳೆಗೆ ಮೂರು ಕ್ಷೇತ್ರಗಳ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.ಕೋಲಾರ ಮೀಸಲು ಕ್ಷೇತ್ರದಿಂದ ಮಲ್ಲೇಶ್ ಬಾಬು ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.
ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್‍ಗೆ ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರ ಬಿಟ್ಟು ಕೊಡಲಾಗಿದೆ. ಉಳಿದ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ರ್ಪಧಿಸಲಿದ್ದು, ಉಭಯ ಪಕ್ಷಗಳು ಪರಸ್ಪರ ಬೆಂಬಲ ನೀಡುವ ಮೂಲಕ ಚುನಾವಣೆಯಲ್ಲಿ ಗರಿಷ್ಠ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಹಾಕಿಕೊಂಡಿವೆ.