ಬೆಂಗಳೂರು,ಮಾ.23- ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮೂರನೇ ಬಾರಿಗೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ಅವರನ್ನು ತೀವ್ರ ನಿಗಾ ಘಟಕದಿಂದ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದ್ದು, ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ.
ಗುರುವಾರ ಬೆಳಿಗ್ಗೆ ಚೆನ್ನೈನ ಆಸ್ಪತ್ರೆಯಲ್ಲಿ ನುರಿತ ವೈದ್ಯರು ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ ನಡೆಸಿದ್ದರು ಎಂದು ಕುಮಾರಸ್ವಾಮಿ ಅವರ ಕಚೇರಿ ಮೂಲಗಳು ತಿಳಿಸಿವೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ.ಸಾಯಿಸತೀಶ್, ಹಂಗೇರಿಯ ತಜ್ಞ ವೈದ್ಯಡಾ.ಗೀಜಾ ಅವರು ಕುಮಾರಸ್ವಾಮಿ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಿದ್ದರು.
ಆಸ್ಪತ್ರೆಯಲ್ಲಿರುವ ಕುಮಾರಸ್ವಾಮಿ ಅವರನ್ನು ತಜ್ಞ ವೈದ್ಯರ ತಂಡವು ನಿಗಾ ವಹಿಸಿ ಮೇಲ್ವಿಚಾರಣೆ ಮಾಡುತ್ತಿದೆ. ನಾಳೆ ಸಂಜೆ ವೇಳೆಗೆ ಆಸ್ಪತ್ರೆಯಿಂದ ಡಿಸ್‍ಚಾರ್ಜ್ ಆಗಿ ಕುಮಾರಸ್ವಾಮಿ ಅವರು ಮನೆಗೆ ಮರಳಲಿದ್ದಾರೆ. ವೈದ್ಯರ ಸಲಹೆಯಂತೆ ಎರಡು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆದು ಬಳಿಕ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.ಬುಧವಾರದಿಂದ ಲೋಕಸಭೆ ಚುನಾವಣಾ ಸಿದ್ಧತೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.