ಬೆಂಗಳೂರು,ಮಾ.17- ಬೇಸಿಗೆ ಕಾಲವಾದ್ದರಿಂದ ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರ, ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಕಟ್ಟೆಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿ ತಾಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ.
ಇದರಿಂದ ನನಗೆ ಬಹಳ ನೋವುಂಟಾಗಿದೆ. ಮೃತ ವಿದ್ಯಾರ್ಥಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮತ್ತೆ ಇಂಥ ಘಟನೆಗಳು ಮರುಕಳಿಸದಿರಲಿ ಎಂದು ಹೇಳಿದ್ದಾರೆ.
ಘಟನೆ ಬಗ್ಗೆ ಸಂಬಂಧಿತ ಅಧಿಕಾರಿಗಳಿಂದ ಮಾಹಿತಿ ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕೆಂದು ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.