ಬೆಂಗಳೂರು,ಜ.25– ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ತಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 22 ಕ್ಕೆ ಮುಂದೂಡಿದೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಪೀಠ ಈ ಆದೇಶ ನೀಡಿ ವಿಚಾರಣೆಯನ್ನು ಮಾರ್ಚ್ 22 ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಸಿದ್ದರಾಮಯ್ಯ ಪರ ವಕೀಲರು, ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಬೇಕಾಗಿದೆ. ಆದರೆ, ಅವರು ಕಾರಣಾಂತರಗಳಿಂದ ಬರಲಾಗಿಲ್ಲ. ಹೀಗಾಗಿ ಅರ್ಜಿ ವಿಚಾರಣೆ ಮುಂದೂಡಬೇಕು ಎಂದು ಕೋರಿದರು. ಇದನ್ನು ದಾಖಲಿಸಿಕೊಂಡ ಪೀಠ ವಿಚಾರಣೆ ಮುಂದೂಡಿತು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರನ್ನು ಆಧರಿಸಿ ತನಿಖೆ ನಡೆಸಲು ರಾಜ್ಯಪಾಲರು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ ಕಲಂ 17 ಎ ಅಡಿ ಅನುಮತಿ ನೀಡಿದ್ದರು. ಈ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಜಾಗೊಳಿಸಿದ್ದ ಏಕ ಸದಸ್ಯ ಪೀಠ, ರಾಜ್ಯಪಾಲರ ಕ್ರಮ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಮೇಲನವಿ ಸಲ್ಲಿಸಿದ್ದರು.