ಬೆಂಗಳೂರು ಮತ್ತು ಕರಾವಳಿಯಲ್ಲಿ ಭಾರೀ ಮಳೆ

Social Share

ಬೆಂಗಳೂರು,ಆ.26- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು ಬೆಳಗಿನ ಜಾವ ಉತ್ತಮ ಮಳೆಯಾಗಿದ್ದು, ಹೊಸಕೋಟೆ, ಚಿಕ್ಕಬಳ್ಳಾಪುರ, ಆನೇಕಲ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಕಳೆದ ಒಂದು ವಾರದಿಂದ ಮತ್ತೆ ಚೇತರಿಕೆ ಕಂಡಿರುವ ಮಳೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಡಿಮೆಯಾಗಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಇನ್ನು ಮೂರು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಮುಂದುವರೆಯಲಿದೆ. ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಗಳಿದ್ದು, ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ನಿನ್ನೆ ಸಂಜೆ ಹಾಗೂ ರಾತ್ರ ಉತ್ತರ ಒಳನಾಡಿನ ಹಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದೆ. ಕೆಲವೆಡೆ ಉತ್ತಮ ಮಳೆಯಾಗಿದೆ. ಆದರೆ ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ರಾಮನಗರ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯ ಹಾಗೂ ತುಮಕೂರು ಜಿಲ್ಲೆಯ ದಕ್ಷಿಣ ಭಾಗದಲ್ಲಿ ವ್ಯಾಪಕ ಪ್ರಮಾಣದ ಉತ್ತಮ ಮಳೆಯಾಗಿದೆ.

ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿ ಗಾಳಿ ನಿರ್ಮಾಣವಾಗಿರುವುದರಿಂದ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಕೆಲವೆಡೆ ಆಗಾಗ್ಗೆ ಮಳೆಯಾಗುವ ಸಂಭವವಿದೆ.

ಮಾಲೂರು ತಾಲ್ಲೂಕಿನ ನೂಟುವೆಯಲ್ಲಿ 80 ಮಿ.ಮೀ, ಹೊಸಕೋಟೆ ತಾಲ್ಲೂಕಿನ ಗಣಗಲೂರಿನಲ್ಲಿ 124.5, ಕೋಲಾರ ತಾಲ್ಲೂಕಿನ ಮಣಗಟ್ಟದಲ್ಲಿ 79.5, ಆನೇಕಲ್ ತಾಲ್ಲೂಕಿನ ಮುಗಳೂರಿನಲ್ಲಿ 96.5, ಚಿಕ್ಕಬಳ್ಳಾಪುರ ತಾಲ್ಲೂಕಿನ ಬಂಡಿಕಲ್‍ನಲ್ಲಿ 124.5 ಮಿ.ಮೀನಷ್ಟು ಭಾರೀ ಮಳೆಯಾದ ವರದಿಯಾಗಿದೆ.

Articles You Might Like

Share This Article