ಬೆಂಗಳೂರು, ಅ.13-ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಗಳ ಪರಿಣಾಮ ರಾಜ್ಯದಲ್ಲಿ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ಹವಾಮಾನ ಇಲಾಖೆಯು ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಇಂದಿನಿAದ ಅಕ್ಟೋಬರ್ 16ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕಳೆದ ಎಂಟು ದಿನಗಳಿಂದ ರಾಜ್ಯದಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ರಾಜ್ಯದ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ಪೂರ್ವ ಅರಬ್ಬೀ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಅಲ್ಲದೆ, ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಗಳು ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ವಾಯುಭಾರ ಕುಸಿತಗಳು ಹಾಗೂ ಮೇಲ್ಮೈ ಸುಳಿಗಾಳಿಗಳು ಉಂಟಾಗಿರುವುದರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣದಿಂದ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜಧಾನಿ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ. ಚದುರಿದಂತೆ ಸಾಧಾರಣ ಮಳೆಯಾಗಲಿದ್ದು. ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.