ಬೆಂಗಳೂರು, ಆ.18- ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದ ರಾಜ್ಯದಲ್ಲಿ ಮುಂಗಾರು ಮಳೆ ಚೇತರಿಕೆಯಾಗಿದೆ. ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.
ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಆರೆಂಜ್ ಅಲರ್ಟ್, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕಳೆದ ಎರಡು ವಾರದಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ. ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಭಾರಿ ಮಳೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಳ್ಳೆ ಮಳೆಯಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಮೇಲೈ ಗಾಳಿಯೊಂದಿಗೆ ಆ.19ರವರೆಗೂ ಮಳೆಯಾಗಲಿದೆ. ಕೆಲವೆಡೆ ವ್ಯಾಪಕವಾಗಿ ಸಾಧಾರಣ ಮಳೆಯಾದರೆ, ಮತ್ತೆ ಕೆಲವೆಡೆ ಮಳೆ ಕಡಿಮೆಯಾಗಲಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಆ.21ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ವ್ಯಾಪಕ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ.ಜುಲೈ ತಿಂಗಳಲ್ಲಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಅಬ್ಬರಿಸಿದ್ದ ಮಳೆ ಆಗಸ್ಟ್‌ನಲ್ಲಿ ಕಡಿಮೆಯಾಗಿದೆ. ಮಲೆನಾಡಿನಲ್ಲಿ ಶೇ.34ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.
ಕರಾವಳಿಯಲ್ಲಿ ಶೇ.11ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಶೇ.100 ಕ್ಕಿಂತ ಹೆಚ್ಚು ಮಳೆಯಾಗಿದೆ. ಆದರೂ ಕೆಲವೆಡೆ ಮಳೆ ಕೊರತೆ ಕಂಡುಬರುತ್ತಿದೆ.
ಜುಲೈನಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ವಾಡಿಕೆಗಿಂತ ಶೇ.51ರಷ್ಟು ಹೆಚ್ಚು ಮಳೆಯಾಗಿತ್ತು.ಒಳನಾಡಿನಲ್ಲಿ ಕಡಿಮೆ ಮಳೆಯಾಗಿದ್ದರೆ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಿ ಅತಿವೃಷ್ಟಿ ಉಂಟಾಗಿತ್ತು.