ಕಾರವಾರ/ಮಡಿಕೇರಿ/ಕೊಡಗು,ಜು.15- ಕರಾವಳಿ, ಕೊಡಗು, ದಕ್ಷಿಣ ಕನ್ನಡ, ಉತ್ತರಕನ್ನಡ ಜಿಲ್ಲೆಗಳಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗತೊಡಗಿವೆ. ಹಳ್ಳಕೊಳ್ಳಗಳು ತುಂಬಿಹರಿದು ಹೊಲಗದ್ದೆಗಳು ಜಲಾವೃತವಾಗಿ ರಸ್ತೆಗಳಿಗೆ ನೀರು ಹರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ.
ಕೊಡಗು, ಉತ್ತರಕನ್ನಡ ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದ ಪರಿಣಾಮ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆಯಾಗಿದೆ.
ಜಲಾಶಯದಿಂದ ತಡರಾತ್ರಿ 10 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದ್ದು, ಕಾವೇರಿ ಮತ್ತು ಹಾರಂಗಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. ತ್ರಿವೇಣಿ ಸಂಗಮದಲ್ಲಿ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಮಳೆ ಇದೇ ರೀತಿ ಮುಂದುವರೆದರೆ ಮಡಿಕೇರಿ, ನಾಪೊಕ್ಲು ರಸ್ತೆ ಸಂಪರ್ಕ ಕಳೆದುಕೊಳ್ಳುವ ಸಾಧ್ಯತೆಯಿದೆ. ಹಲವಾರು ಹಳ್ಳಿಗಳಲ್ಲಿ ವಿದ್ಯುತ್‌ಕಂಬ ಹಾಗೂ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.
ಬೆಳಗಾವಿ :
ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ, ದೂಧ್‌ಗಂಗಾ, ವೇದ್‌ಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸೇತುವೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ.
ಚಿಕ್ಕಮಗಳೂರು :
ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿಹರಿಯುತ್ತಿದ್ದು, ಹೊಲಗದ್ದೆಗಳು ಜಲಾವೃತಗೊಂಡಿವೆ. ಭದ್ರಾ ತುಂಗಾ ಜಲಾಶಯಕ್ಕೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ.
ಉತ್ತರ ಕನ್ನಡ :
ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರೆದಿದ್ದು, ಹಲವೆಡೆ ಹಾನಿ ಸಂಭವಿಸಿದೆ. ತಾಲ್ಲೂಕಿನ ಇಡೂರಿನ ಮನೆಗಳಿಗೆ ನೀರು ನುಗ್ಗಿ ಗ್ರಾಮ ಮುಳುಗಡೆಯಾದಂತಾಗಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.
ಕಾರವಾರ ತಾಲ್ಲೂಕಿನ ಬಿಣಗ, ಚಂಗ್ಯಾ ಸೇರಿದಂತೆ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿ ಜನ ಜಾಗರಣೆ ಮಾಡುವಂತಾಗಿತ್ತು. ಈ ಭಾಗದ ನೂರಾರು ಎಕರೆ ಪ್ರದೇಶ ಜಲಾವೃತಗೊಂಡು ಬೆಳೆಗಳು ಹಾನಿಯಾಗಿವೆ. ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಮಂಗಳೂರು :
ಮಂಗಳೂರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜಲಾಶಯಗಳಿಗೆ ನೀರು ಹರಿದುಬರುತ್ತಿದೆ. ಕಬಿನಿ ಭರ್ತಿಯಾಗಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಹೇಮಾವತಿ, ಕೃಷ್ಣರಾಜಸಾಗರ ಜಲಾಶಯಕ್ಕೆ ಕೂಡ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಅತ್ತ ತೀರ್ಥಹಳ್ಳಿಯ ಆಗುಂಬೆಯ 5ನೇ ಘಾಟ್‌ನ ತಿರುವಿನಲ್ಲಿ ಗುಡ್ಡಕುಸಿತ ಉಂಟಾದ ಪರಿಣಾಮ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.