Thursday, September 19, 2024
Homeರಾಜ್ಯದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಆರೆಂಜ್‌ ಅಲರ್ಟ್‌ ಘೋಷಣೆ

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು, ಆ.16-ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಇಂದು ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆಯು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಸರಾಸರಿ ಸಾಧಾರಣ ಮಳೆ ಮುಂದುವರೆಯಲಿದೆ. ಆದರೆ, ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಆಧರಿಸಿ ಈ ಮಾಹಿತಿ ನೀಡಲಾಗಿದೆ. ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಅದೇ ರೀತಿ ಉತ್ತರ ಒಳನಾಡಿನಲ್ಲೂ ವ್ಯಾಪಕವಾಗಿ ಮಳೆಯಾಗಲಿದೆ. ಆದರೆ, ಒಂದೆರಡು ಕಡೆ ಭಾರೀ ಮಳೆಯಾಗುವ ಲಕ್ಷಣಗಳಿವೆ.

ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ನದಿಗಳಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಭದ್ರಾ, ಹಾರಂಗಿ, ಕೆಆರ್‌ಎಸ್‌‍, ಕಬಿನಿ, ಹೇಮಾವತಿ, ಲಿಂಗನಮಕ್ಕಿ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

ಈ ಜಲಾಶಯಗಳು ಈಗಾಗಲೇ ಭರ್ತಿಯಾಗಿದ್ದು, ಒಳಹರಿವು ಹೆಚ್ಚಾದಂತೆ ಹೊರ ಹರಿವನ್ನು ಹೆಚ್ಚಿಸಲಾಗುತ್ತದೆ. ಹೀಗಾಗಿ ನದಿ ಪಾತ್ರ ಜನವಸತಿಗಳಲ್ಲಿರುವ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಜುಲೈನಲ್ಲಿ ಅಬ್ಬರಿಸಿದ ಮುಂಗಾರು ಮಳೆ ಆಗಸ್ಟ್‌ನಲ್ಲಿ ಕಡಿಮೆಯಾಗಿದೆ. ಈ ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲೂ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ.

ಆದರೆ, ರಾಜ್ಯದ ಒಳನಾಡಿನಲ್ಲಿ ಚೇತರಿಕೆ ಕಂಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ವಾಡಿಕೆಗಿಂತ ಹೆಚ್ಚು ಮಳೆ ಕಳೆದ ಎರಡು ವಾರಗಳಲ್ಲಿ ಬಿದ್ದಿದೆ. ಆದರೆ, ಭಾರಿ ಮಳೆಯಾಗಿಲ್ಲ. ಹೀಗಾಗಿ ಸಣ್ಣ ಕೆರೆ-ಕಟ್ಟೆಗಳಿಗೆ ಸಾಕಷ್ಟು ನೀರು ಬಂದಿಲ್ಲ.

RELATED ARTICLES

Latest News