ಬೆಂಗಳೂರು. ಸೆ.4- ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಬೆನ್ನಲ್ಲೇ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪರಿಣಾಮದಿಂದ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇನ್ನೂ ಎರಡು ದಿನ ಮುಂದುವರೆಯಲಿದೆ. ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಕಲ್ಯಾಣ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಾಗ್ಗೆ ಕೆಲವೆಡೆ ತುಂತುರು ಇಲ್ಲವೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ.
ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ಆಂಧ್ರ ಪ್ರದೇಶದ ಕಡೆಗೆ ಸಾಗುತ್ತಿರುವುದರಿಂದ ರಾಜ್ಯದ ಮೇಲೆ ನೇರ ಪರಿಣಾವಿಲ್ಲ. ಆದರೂ ರಾಜ್ಯದ ಈಶಾನ್ಯ ಭಾಗದ ಜಿಲ್ಲೆಗಳಾದ ರಾಯಚೂರು, ಯಾದಗಿರಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ತಜ್ಞರು ಹೇಳಿದ್ದಾರೆ.
ಈಗಾಗಲೇ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಸದ್ಯಕ್ಕೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿಲ್ಲ. ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆಗಳಿವೆ. ಹೀಗಾಗಿ ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಾಗಬಹುದು ಎಂದು ಅವರು ತಿಳಿಸಿದ್ದಾರೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಸೆ.7ರ ನಂತರ ಈ ಭಾಗದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ, ಭಾರಿ ಮಳೆಯಾಗುವ ಮುನ್ಸೂಚನೆಗಳಿಲ್ಲ. ಹೀಗಾಗಿ ಯಾವುದೇ ಎಚ್ಚರಿಕೆಯನ್ನು ಘೋಷಣೆ ಮಾಡಿಲ್ಲ.