ಬೆಂಗಳೂರು, ಆ.4- ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಕೆರೆಕಟ್ಟೆಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಜನಜೀವನವು ಕೂಡ ಬಾತವಾಗಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲೂ ಕೂಡ ವಾಡಿಕೆಗಿಂತ ಹೆಚ್ಚಾಗಿ ಸುರಿಯುತ್ತಿರುವ ಭಾರೀ ಮಳೆ ಆತಂಕ ಸೃಷ್ಟಿಸಿದೆ.
ಕಳೆದ ಮೂರು ದಿನಗಳಲ್ಲಿ ಬೆಂಗಳೂರಿನಲ್ಲಿ 162.7 ಮೀಟರ್ ಮಳೆಯಾಗಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಮಳೆಯಾಗಿದೆ. ತುಮಕೂರು, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಹಾಸನ, ಗುಲ್ಬರ್ಗಾ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕೆರೆಕಟ್ಟೆಗಳು ಮೈದುಂಬಿ ಹರಿಯುತ್ತಿವೆ.
ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ರಾತ್ರಿಯಿಡೀ ಜಾಗರಣೆ ಮಾಡುವಂತಾಗಿದೆ. ಇನ್ನು ರೈತರ ಕೃಷಿ ಜಮೀನುಗಳು ಜಲಾವೃತಗೊಂಡು ಫಸಲೆಲ್ಲ ನೀರು ಪಾಲಾಗಿದ್ದು, ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.