ಬೆಂಗಳೂರು, ಜೂ.8-ನೈರುತ್ಯ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಒಳನಾಡಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಇನ್ನೆರಡು ದಿನಗಳ ಕಾಲ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಭಾಗಶಃ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.ಕೇರಳದಿಂದ ಮಹಾರಾಷ್ಟ್ರದವರೆಗೆ ಮೇಲುಬ್ಬರ ಉಂಟಾಗಿದ್ದು, ಬಂಗಾಳ ಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಕೇರಳ, ಕೊಡಗು ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಎಂಟತ್ತು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಅದೇ ರೀತಿ ಪ್ರಮುಖ ಜಲಾಶಯಗಳಲ್ಲೂ ದಿನದಿಂದ ದಿನಕ್ಕೆ ನೀರಿನ ಮಟ್ಟ ಹೆಚ್ಚಾಗುತ್ತಿದೆ.ಭಾರೀ ಮಳೆಯಾಗುತ್ತಿರುವ ಕರಾವಳಿ ಹಾಗೂ ಮಲೆನಾಡಿನಲ್ಲಿ ಭೂ ಕುಸಿತ, ಮರ ಹಾಗೂ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ನಿರಂತರ ಮಳೆಯಿಂದ ಜನಜೀವನವೂ ಅಸ್ತವ್ಯಸ್ತಗೊಂಡಿದೆ.
ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತರು ಸಹ ಬಿತ್ತನೆಗೆ ಭೂಮಿ ಹದ ಮಾಡತೊಡಗಿದ್ದಾರೆ. ಜೂನ್ ತಿಂಗಳಲ್ಲೂ ಉತ್ತಮ ಮಳೆಯಾಗಿತ್ತು. ಹೀಗಾಗಿ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳ ಬಿತ್ತನೆಗೆ ರೈತರು ಸಿದ್ಧತೆ ನಡೆಸುತ್ತಿದ್ದಾರೆ.