Thursday, May 22, 2025
Homeರಾಜ್ಯಕರಾವಳಿ-ಮಲೆನಾಡಿನಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ, ಬೆಂಗಳೂರಿನಲ್ಲಿ ತಗ್ಗಿದ ವರುಣಾರ್ಭಟ

ಕರಾವಳಿ-ಮಲೆನಾಡಿನಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ, ಬೆಂಗಳೂರಿನಲ್ಲಿ ತಗ್ಗಿದ ವರುಣಾರ್ಭಟ

Heavy rain warning in coastal, Malnad

ಬೆಂಗಳೂರು, ಮೇ 22-ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದ ಬೆಂಗಳೂರಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಸದ್ಯಕ್ಕೆ ಭಾರಿ ಮಳೆಯಾಗುವ ಮುನ್ಸೂಚನೆಗಳಿಲ್ಲ.

ಹವಾಮಾನ ಮುನ್ಸೂಚನೆ ಪ್ರಕಾರ ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಲಿದೆ. ಆದರೆ, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಗದಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಿದೆ. ಕಲಬುರಗಿ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಹಾಸನ, ಕೊಡಗು, ಮಂಡ್ಯ ರಾಮನಗರ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಿದೆ.

ಅರಬ್ಬಿ ಸಮುದ್ರದ ಗೋವಾ ಹಾಗೂ ಕರ್ನಾಟಕದ ಕರಾವಳಿ ಭಾಗದಲ್ಲಿ ಮೇಲೆ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಮೇ 26ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಲಿದ್ದು, ಆಗಾಗ್ಗೆ ಗಂಟೆಗೆ 40ರಿಂದ 50 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹೇಳಿದ್ದಾರೆ.

ಆದರೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು. ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೆಲವೆಡೆ ಗುಡುಗು, ಮಿಂಚು ಹಾಗೂ ಗಂಟೆಗೆ 40-50 ಕಿ.ಮೀ.ವೇಗದ ಗಾಳಿ ಸಹಿತ ಭಾರಿ ಮಳೆಯಾಗಲಿದೆ. ಒಟ್ಟಾರೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ ಎಂದು ಅವರು ನುಡಿದ್ದಾರೆ.

RELATED ARTICLES

Latest News