ಬೆಂಗಳೂರು, ಆ.30-ಅರಬ್ಬೀ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಎರಡು ಪ್ರತ್ಯೇಕ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಧಿಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿದ್ದು, ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ಇಂದೂ ಕೂಡ ಮಳೆ ಮುಂದುವರೆಯಲಿದೆ. ಕರಾವಳಿ, ಮಲೆನಾಡು, ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಭಾಗಕ್ಕೆ ರೆಡ್ ಅಲರ್ಟ್ ಹಾಗೂ ಉಳಿದೆಡೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಭಾನುವಾರದಿಂದ ಸಾಧಾರಣ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಆಗಾಗ್ಗೆ ಹಗುರ ಇಲ್ಲವೇ ಸಾಧಾರಣ ಮಳೆ ನಿರೀಕ್ಷಿಸಬಹುದಾಗಿದೆ.
ಬಂಗಾಳ ಕೊಲ್ಲಿಯಲ್ಲಿ ತೀವ್ರ ಸ್ವರೂಪದ ವಾಯುಭಾರ ಕುಸಿತವಾಗಿದ್ದು, ಚಂಡಮಾರುತದ ಸ್ವರೂಪ ಪಡೆಯುತ್ತಿದೆ.ಅದರ ನೇರ ಪರಿಣಾಮ ರಾಜ್ಯದ ಮೇಲಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ಹೇಳಿದರು. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರೆದರೆ, ಉತ್ತರ ಕರ್ನಾಟಕದ ಭಾಗದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಚದುರಿದಂತೆ ಆಗಾಗ್ಗೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದರು.
ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಅಷ್ಟಾಗಿ ಆಗುವುದಿಲ್ಲ. ಗುಜರಾತ್ ರಾಜಸ್ಥಾನದ ಕಡೆಗಿರುವುದರಿಂದ ರಾಜ್ಯದ ಮೇಲೆ ನೇರ ಪರಿಣಾಮವಿಲ್ಲ. ಅದೇ ರೀತಿ ಬಂಗಾಳ ಕೊಲ್ಲಿಯಲ್ಲಿ ಉಯಂಟಾಗಿರುವ ಚಂಡ ಮಾರುತವು ಒಡಿಸ್ಸಾ ಹಾಗೂ ಆಂಧ್ರಪ್ರದೇಶದ ಕಡೆಗೆ ಚಲಿಸುವುದರಿಂದ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆ ಇದೆ. ಹೀಗಾಗಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ವಿರಳ ಎಂದು ಅವರು ಹೇಳಿದರು.