ಬೆಂಗಳೂರು, ಮಾ.31-ಬಂಗಾಳ ಕೊಲ್ಲಿಯಲ್ಲಿ ಮೇಲೆ ಸುಳಿಗಾಳಿ ಹಾಗೂ ಕರ್ನಾಟಕದ ಒಳನಾಡಿನಲ್ಲಿ ಟ್ರಫ್ ಉಂಟಾಗಿರುವ ಪರಿಣಾಮ ಏಪ್ರಿಲ್ ನಾಲ್ಕರವರೆಗೆ ಮಳೆಯಾಗುವ ಮುನ್ಸೂಚನೆಗಳಿವೆ.
ರಾಜ್ಯಾದ್ಯಂತ ಮಳೆ ಮುಂದುವರೆಯುವ ಲಕ್ಷಣಗಳಿದ್ದು, ಚದುರಿದಂತೆ ಹಗುರ ಮಳೆಯಾಗಲಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ, ಅಲ್ಲದೆ, ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಏ.2ರಿಂದ ಏ.4ರವರೆಗೆ ಬೆಂಗಳೂರು ಸುತ್ತಮತ್ತ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾವೇರಿ, ಗದಗ, ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಮುನ್ಸೂಚನೆಗಳಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವುದಾಗಿ ಅವರು ಹೇಳಿದ್ದಾರೆ.
ಮಳೆಯಾಗುವ ಸಾಧ್ಯತೆ ಇರುವುದರಿಂದ ಏ.2ರಿಂದ ಏ.5ರ ನಡುವಿನ ಅವಧಿಯಲ್ಲಿ ಗರಿಷ್ಠ ತಾಪಮಾನದಲ್ಲಿ 3ರಿಂದ 4 ಡಿ.ಸೆಂ.ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆ ನಿರೀಕ್ಷಿಸಬಹುದಾಗಿದೆ ಎಂದಿದ್ದಾರೆ.
ಏಪ್ರಿಲ್ 3 ಮತ್ತು 4ರಂದು ರಾಜ್ಯದ ಕೆಲವೆಡೆ ಭಾಗಶಃ ವ್ಯಾಪಕ ಹಾಗೂ ರಾಜ್ಯಾದ್ಯಂತ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ನಿನ್ನೆ ರಾಜ್ಯದ ಕೆಲವೆಡೆ ಮಳೆಯಾಗಿದೆ. ಧಾರವಾಡದಲ್ಲಿ 2 ಸೆ.ಮೀ.ನಷ್ಟು ಮಳೆಯಾಗಿದೆ. ಇನ್ನೂ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 41 ಡಿ.ಸೆಂ.ನಷ್ಟು ದಾಖಲಾಗಿದೆ. ಬೆಂಗಳೂರಿನಲ್ಲಿ 35ಡಿ.ಸೆಂ. ನಷ್ಟು ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.