ಹುಬ್ಬಳ್ಳಿ,ಫೆ.13- ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ನೀಡುವ, ಸುಳ್ಳು ಸಂದೇಶಗಳನ್ನು ಹರಡುವವರ ಮೇಲೆ ನಮ್ಮ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದರು.
ನಗರದಲ್ಲಿಂದು ಮಾತನಾಡಿದ ಅವರು, ಶಾಂತಿ ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ಹಿಜಾಬ್ ವಿವಾದದಲ್ಲಿ ಅನಗತ್ಯ ಗೊಂದಲವನ್ನು ಯಾರೂ ಸೃಷ್ಟಿಸಬಾರದು ಎಂದು ಮನವಿ ಮಾಡಿದರು. ಸಾಮಾಜಿಕ ಜಾಲತಾಣಗಳಲ್ಲಾಗಲಿ, ಇನ್ನಿತರ ವೇದಿಕೆಗಳಲ್ಲಾಗಲಿ ವಿವಾದ ಬಗ್ಗೆ ಪ್ರಚೋದನೆ ನೀಡುವ ಹಾಗೂ ಸಂದೇಶಗಳನ್ನು ರವಾನಿಸುವವರ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ ಜೋಕೆ ಎಂದರು.
ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು. ಹಿಜಾಬ್ ವಿವಾದಕ್ಕೆ ಸಂಬಂಸಿದಂತೆ ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ಹೈಕೋರ್ಟ್‍ನ ಆದೇಶಕ್ಕೆ ನಾವು ಬದ್ದರಾಗಿದ್ದೇವೆ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.
ಕಾಲೇಜುಗಳನ್ನು ಪ್ರಾರಂಭಿಸುವ ಕುರಿತಂತೆ ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿ ವರದಿ ನೀಡುವಂತೆ ಶಿಕ್ಷಣ ಇಲಾಖೆ ಸಚಿವರಿಗೆ ಸೂಚಿಸಿದ್ದೇನೆ. ಅವರು ಚರ್ಚೆ ನಡೆಸಿ ವರದಿ ನೀಡಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಹೇಳಿದರು.
