ಹಿಂದಿ ದಿವಸ್ ಆಚರಣೆ ವಿರೋಧಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

Social Share

ಬೆಂಗಳೂರು,ಸೆ.14- ಕೇಂದ್ರ ಸರ್ಕಾರದ ಹಿಂದಿ ದಿವಸ್ ಆಚರಣೆ ಯನ್ನು ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು, ರಾಜಕೀಯ ಪಕ್ಷಗಳು ನಗರದಲ್ಲಿಂದು ಪ್ರತಿಭಟನೆ ನಡೆಸಿದವು. ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ರಾಜ್ಯಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದ್ದು, ಬೆಂಗಳೂರಿನಲ್ಲಿ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ, ನೇತೃತ್ವದಲ್ಲಿ ಫ್ರೀಡಂಪಾರ್ಕ್‍ನಲ್ಲಿ ಇಂದು ಧರಣಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣಗೌಡ, ಭಾಷಾವಾರು ಪ್ರಾಂತ್ಯದ ಆಧಾರದಲ್ಲಿ ರಚನೆಯಾಗಿರುವ ರಾಜ್ಯಗಳ ಒಕ್ಕೂಟವಾಗಿ ಭಾರತ ದೇಶವಾಗಿದೆ. ಆಡಳಿತ ನಡೆಸುವ ಎಲ್ಲ ಪಕ್ಷ ಹಾಗೂ ಸರ್ಕಾರಗಳು ಪ್ರತಿ ವರ್ಷ ಸೆ.14ರಂದು ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ದಿವಸ್ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ : ಮೈಸೂರು ಅರಮನೆಯಲ್ಲಿ ಗಂಡು ಮರಿಗೆ ನೀಡಿದ ಲಕ್ಷ್ಮಿ

ಹಿಂದಿ ಹೇರಿಕೆ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದ್ದು, ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಇದರಲ್ಲಿ ಯಾವುದೇ ಮುಲಾಜಿಲ್ಲ ಎಂದು ಹೇಳಿದರು. ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಹಾಗೂ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಮಲ್ಲೇಶ್ವರಂ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಪಾಲ್ಗೊಂಡಿದ್ದರು.

ನಮ್ಮಲ್ಲಿ ರಾಜಕೀಯ ಇಚ್ಛಾಶಕ್ತಿ ಇಲ್ಲ. ಇದರಿಂದ ನಮ್ಮ ಮೇಲೆ ದಬ್ಬಾಳಿಕೆಗಳು ಕೇಂದ್ರದಿಂದ ನಿರಂತರವಾಗಿ ನಡೆಯುತ್ತಿದೆ. ಕನ್ನಡಿಗರು ಸ್ವಾಭಿಮಾನ ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದರು. ನೆರೆಯ ತಮಿಳುನಾಡಿನ ಭಾಷಾ ಅಭಿಮಾನದಿಂದ ಹಿಂದಿ ನುಸುಳಲು ಸಾಧ್ಯವಿಲ್ಲ. ಆದರೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಕೂಡ ದಿಟ್ಟ ನಿರ್ಧಾರ ಕೈಗೊಳ್ಳಬೇಕು. ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಕೇವಲ ಕಡತದಲ್ಲಿ ಆದೇಶವಿದ್ದರೆ ಸಾಲದು ಅದು ಅನುಷ್ಠಾನಕ್ಕೆ ಬರಬೇಕು ಎಂದು ಅವರು ಒತ್ತಾಯಿಸಿದರು.

ಶಿವರಾಮೇಗೌಡ ಮಾತನಾಡಿ, ಇದೇ ರೀತಿ ಹಿಂದಿ ಹೇರಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡ ಪಕ್ಷದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸ ಲಾಗಿದ್ದು, ಹಲವು ಪ್ರತಿಭಟನಾಕಾರರನ್ನು ಬಂಸಲಾಯಿತು.

Articles You Might Like

Share This Article