ಬೆಂಗಳೂರು,ಫೆ.23- ಶಿವಮೊಗ್ಗ ಭಜರಂಗದಳದ ಕಾರ್ಯ ಕರ್ತ ಹರ್ಷ ಕಗ್ಗೊಲೆಯ ಹಿಂದೆ ಅನೇಕ ಸಂಘಟನೆಗಳ ಕೈವಾಡವಿರುವ ಶಂಕೆಯಿದ್ದು, ಬಂಧಕ್ಕೊಳಗಾಗಿರುವ ಆರೋಪಿಗಳಿಗೆ ಯಾರ ಸಂಪರ್ಕವಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧನದಲ್ಲಿರುವ ಆರೋಪಿಗಳಿಗೆ ಯಾರ ಜೊತೆ ಸಂಪರ್ಕವಿದೆ? ಘಟನೆಯ ಹಿಂದೆ ಯಾರು ಇದ್ದಾರೆ ಎನ್ನುವುದರ ಕುರಿತು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದರು. ಸದ್ಯ ಶಿವಮೊಗ್ಗ ಈಗ ಸಂಪೂರ್ಣವಾಗಿ ಶಾಂತವಾಗಿದೆ. ಇನ್ನಷ್ಟು ದಿನ ಪೊಲೀಸ್ ಭದ್ರತೆ ಇರುತ್ತದೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ.
ಬಂಧಿತರ ಮೇಲೆ ಅನೇಕ ಕೇಸ್‍ಗಳಿವೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದರು. ಅನೇಕ ಹಿಂದೂ ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬೆದರಿಕೆ ಬಂದ ಕೂಡಲೇ ಪೊಲೀಸ್‍ಗೆ ದೂರು ಕೊಡಿ, ಭದ್ರತೆ ಕೊಡುತ್ತೇವೆ ಎಂದು ಅವರು ಭರವಸೆ ನೀಡಿದರು.
ಕೋಟೆ ಮತ್ತೆ ದೊಡ್ಡಪೇಟೆ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧವೂ ತನಿಖೆಯಾಗುತ್ತಿದೆ. 5 ವರ್ಷ ಸಂಪೂರ್ಣ ತನಿಖೆಗೆ ಸೂಚನೆ ನೀಡಲಾಗಿದೆ. ಕ್ರೈಂ ಆಡಿಟ್‍ಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಬಂಧಿತರಾದ ಆರೋಪಿಗಳು ಒಂದಕ್ಕಿಂತ ಹೆಚ್ಚು ಅಪರಾಧ ಕೃತ್ಯಗಳನ್ನು ಮಾಡಿದ್ದು, ಇವರ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೊಲೀಸ್ ಅಧಿಕಾರಿ ಗಳು ಹಾಗೂ ಸಿಬ್ಬಂದಿಗಳ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದರು.
ಈ ಸಂಬಂಧ ಡಿಜಿ ಅವರಿಗೂ ತನಿಖೆ ನಡೆಸುವಂತೆ ಪತ್ರ ಬರೆದಿದ್ದೇನೆ. ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದು, ಒಂದು ವೇಳೆ ಪೊಲೀಸರು ಲೋಪವೆಸಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದರು.
ಎಸ್‍ಡಿಪಿಐ ಮತ್ತು ಪಿಎಫ್‍ಐ ಸಂಘಟನೆ ಬ್ಯಾನ್ ವಿಚಾರವಾಗಿ ಮಾತನಾಡಿದ ಅವರು, ಶಾಸಕರು ಹಾದಿಯಾಗಿ ಎಲ್ಲರೂ ಇದನ್ನು ನಿಷೇಧಿಸುವಂತೆ ಒತ್ತಾಯ ಮಾಡಿದ್ದಾರೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
