ಬೆಂಗಳೂರು, ಸೆ.8– ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟ ಹಾಗೂ ಪೊಲೀಸರು ನಡೆಸಿರುವ ಲಾಠಿಚಾರ್ಜ್ ಅನ್ನು ಖಂಡಿಸುವುದಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ತಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಮೆರವಣಿಗೆಗಳನ್ನು ನೆಮ್ಮದಿಯಾಗಿ ಆಚರಿಸಲಾಗದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.
ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟದ ಘಟನೆಯಲ್ಲಿ ಮಹಿಳೆಯರು ಹಾಗೂ ಪೊಲೀಸರು ಗಾಯಗೊಂಡಿರುವುದನ್ನು ಗಮನಿಸಿದರೆ, ಕಾನೂನು ಮತ್ತು ಸುವ್ಯವಸ್ಥೆಯು ರಾಜ್ಯದಲ್ಲಿ ಸಂಪೂರ್ಣ ಕುಸಿದಿರುವುದನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.
ಈ ಘಟನೆಯಲ್ಲಿ ಮಹಿಳೆಯರ ಮೇಲೆ ಕೂಡ ಪೊಲೀಸರು ಲಾಠಿಚಾರ್ಜ್ ಮಾಡಿರುವುದು ನಿಜಕ್ಕೂ ಖಂಡನೀಯ. ಅಸಮರ್ಥ ಗೃಹ ಮತ್ತು ಉಸ್ತುವಾರಿ ಸಚಿವರು ಈ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮದ್ದೂರಿಗೆ ಭೇಟಿ :ಇಂದು ಮಧ್ಯಾಹ್ನ ಕಲ್ಲು ತೂರಾಟದಿಂದ ಉದ್ವಿಗ್ನಗೊಂಡಿದ್ದ ಮದ್ದೂರಿಗೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು ನಿನ್ನೆ ರಾತ್ರಿಯಿಂದೀಚೆಗೆ ನಡೆದ ಘಟನೆ ಮಾಹಿತಿಯನ್ನು ಸ್ಥಳೀಯರಿಂದ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದ್ದಾರೆ.