ಬೆಳಗಾವಿ,ಡಿ.25- ಕಾಂಗ್ರೆಸ್ ಮಹಾ ಅಧಿವೇಶನದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಭದ್ರತೆ ಕುರಿತು ಸಭೆ ನಡೆಸಿದ್ದಾರೆ.
ಸ್ವಾತಂತ್ರ್ಯ ಪೂರ್ವದಲ್ಲಿ 1924ರಂದು ಮಹಾತಗಾಂಧೀಜಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಮಹಾ ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷ ಕಳೆದ ಹಿನ್ನೆಲೆ ಯಲ್ಲಿ ಆಚರಿಸಲಾಗುತ್ತಿರುವ ಶತಮಾನೋತ್ಸವದಲ್ಲಿ ದೇಶಾದ್ಯಂತ ಗಣ್ಯರು, ಅತಿ ಗಣ್ಯರು, ಸಂಸದರು, ಕಾಂಗ್ರೆಸ್ನ ಪದಾಧಿಕಾರಿಗಳು, ಪ್ರಮುಖ ನಾಯಕರು ಭಾಗವಹಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಭದ್ರತಾ ಕ್ರಮಗಳ ಬಗ್ಗೆ ಗೃಹಸಚಿವರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್.ಹಿತೇಂದ್ರ, ಉತ್ತರ ವಲಯ ಐಜಿಪಿ ವಿಕಾಸ್ಕುಮಾರ್, ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾಮಾರ್ಟಿನ್ ಮಾರ್ಬನ್ಯಾಂಗ್, ಬೆಳಗಾವಿ ಎಸ್ಪಿ ಭೀಮಾ ಶಂಕರ್ ಗುಳ್ಳೇದ್, ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಸಭೆಯಲ್ಲಿ ಭಾಗವಹಿಸಿದ್ದರು.
150ಕ್ಕೂ ಹೆಚ್ಚು ಸಂಸದರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಜೊತೆಗೆ ಕಾಂಗ್ರೆಸ್ನ ಪ್ರಭಾವಿ ನಾಯಕರಾದ ಸೋನಿಯಾಗಾಂಧಿ, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ನ ರಾಷ್ಟ್ರೀಯ ಪದಾಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಕಾಂಗ್ರೆಸ್ ಮಹಾಧಿವೇಶನದ ಪ್ರಯುಕ್ತ ಎಐಸಿಸಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ, ಬಹಿರಂಗ ಸಮಾವೇಶ, ಸುವರ್ಣಸೌಧದ ಮುಂಭಾಗದಲ್ಲಿ ಗಾಂಧಿ ಪ್ರತಿಮೆ ಅನಾವರಣ, ಸ್ವಾತಂತ್ರ್ಯ ಸಂಗ್ರಾಮ ಶುರುವಾದ ಶತಮಾನೋತ್ಸವದ ನೆನಪಿಗಾಗಿ ಜಾಥಾ ಸೇರಿದಂತೆ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸುತ್ತಿರುವುದರಿಂದ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಈ ನಡುವೆ ಬಿಜೆಪಿ ಸಿ.ಟಿ.ರವಿಯವರ ಪ್ರಕರಣವನ್ನು ಮುಂದಿಟ್ಟುಕೊಂಡು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಬಿಜೆಪಿ ಹೋರಾಟಕ್ಕೆ ಅನುಮತಿ ನೀಡದಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಒತ್ತಡ ಹೇರಲಾಗುತ್ತಿದೆ. ಒಂದು ವೇಳೆ ನ್ಯಾಯಾಲಯದಿಂದ ಅನುಮತಿ ಪಡೆದರೆ ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಇದೇ ವೇಳೆ ಚರ್ಚೆ ನಡೆಸಲಾಗಿದೆ.
ಮಹಾಧಿವೇಶನದ ವೇಳೆ ಯಾವುದೇ ಗೊಂದಲಗಳಾಗಬಾರದು, ಭದ್ರತಾ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಸಭೆಗೆ ಡಿ.ಕೆ.ಶಿವಕುಮಾರ್ ಆಗಮಿಸುವ ಮುನ್ನ ಪರಮೇಶ್ವರ್ ಅವರು ಪೊಲೀಸ್ ಅಧಿಕಾರಿಗಳ ಜೊತೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಮತ್ತು ಇಡೀ ರಾತ್ರಿ ಅವರನ್ನು ನಾಲ್ಕು ಜಿಲ್ಲೆಗಳಲ್ಲಿ ಸುತ್ತಾಡಿಸಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ. ತಮ ಗಮನಕ್ಕೆ ಬರದೆ ಅತಿರೇಕವಾಗಿ ವರ್ತಿಸಿದ್ದೇಕೆ ಎಂದು ಗೃಹಸಚಿವರು ಅಸಹನೆ ವ್ಯಕ್ತಪಡಿಸಿದ್ದು, ಹಿರಿಯ ಅಧಿಕಾರಿಗಳು ಅದಕ್ಕೆ ಸಮಜಾಯಿಷಿ ನೀಡಿದ್ದಾರೆ ಎಂದು ತಿಳಿದುಬಂದಿದೆ.