ಬೆಂಗಳೂರು : ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 1,000 ರೂಪಾಯಿಗಳಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಇದು 2025-26ರ ಆಯವ್ಯಯ ಭಾಷಣದ ಭಾಗವಾಗಿ ಘೋಷಿಸಲಾದ ಪ್ರಮುख ನಿರ್ಣಯವಾಗಿದೆ.
ಈ ಬಗ್ಗೆ 2025-26ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಘೋಷಿಸಿತ್ತು. ಈ ಘೋಷಣೆ ಅನ್ವಯ ಆಯುಷ್ಮಾನ್ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡಲಾಗುತ್ತದೆ.
ಇದರಿಂದಾಗಿ ಗೌರವಧನ ರೂ1 ಸಾವಿರ ಹೆಚ್ಚಳವಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿಯು ಹೊರಡಿಸಿದ ನಡವಳಿಯ ಪ್ರಕಾರ, “ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವ ಮೂಲಕ ಗೌರವಧನವನ್ನು 1,000 ರೂಪಾಯಿಗಳಷ್ಟು ಹೆಚ್ಚಿಸಲಾಗುವುದು” ಎಂದು 2025-26ರ ಬಜೆಟ್ನ ಖಂಡಿಕೆ 148ರಲ್ಲಿ ಘೋಷಿಸಲಾಗಿದೆ.
ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಸಾವಿರ ಜನಸಂಖ್ಯೆಗೆ ಹಾಗೂ ನಗರ ಪ್ರದೇಶದಲ್ಲಿ ಎರಡೂವರೆ ಸಾವಿರ ಜನಸಂಖ್ಯೆಗೆ ಒಬ್ಬರಂತೆ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಲಾಗುತ್ತಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 42,524 ಹುದ್ದೆಗಳು ಮಂಜೂರಾಗಿದ್ದು, ರಾಜ್ಯದಲ್ಲಿ ಸದ್ಯ 41 ಸಾವಿರ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆದೇಶ ಹೇಳಿದೆ.