ಹೊಸಕೋಟೆ, ಮೇ 12- ಟೆಂಪೋ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಡಿಶಾ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಚಿಕ್ಕಹುಲ್ಲೂರು ಬಳಿ ತಡರಾತ್ರಿ ನಡೆದಿದೆ.
ಮೃತರನ್ನು ಋಷಿಕೇಶ್ ಮುಂಡ (30), ಬಕ್ತ ಬಂಡು (22) ಎಂದು ಗುರುತಿಸಲಾಗಿದೆ. ಇವರು ಇಲ್ಲಿನ ಫಿಕೂಸ್ ಪ್ಯಾಕ್ ಕಂಪೆನಿ ಉದ್ಯೋಗಿಗಳೆಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ.
ಟೆಂಪೋ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಹೊಸಕೋಟೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.