ಹುಬ್ಬಳ್ಳಿ,ಮೇ 6- ಅತೀ ವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಶ್ವೇತಾ (29) ಅಂಜಲಿ (26) ಸಂದೀಪ್ (26), ವಿಠಲ್ (55) ಹಾಗೂ ಶಶಿಕಲಾ (40) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 8.30 ರ ಸುಮಾರಿನಲ್ಲಿ ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರು ಕ್ರಾಸ್ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರಿನೊಳಗೆ ಸಿಕ್ಕಿಕೊಂಡಿದ್ದ ಮೃತದೇಹಗಳನ್ನು ಸ್ಥಳೀಯರ ನೆರವಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರಿನಲ್ಲಿದ್ದವರು ಎಲ್ಲಿಗೆ ಹೋಗುತ್ತಿದ್ದರು ಎಂಬುವುದು ತಿಳಿದು ಬಂದಿಲ್ಲ. ಪೊಲೀಸರು ಕಾರಿನಲ್ಲಿದ್ದವರ ಬಗ್ಗೆ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
ಬೆಳಗ್ಗೆ ಈ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದರಿಂದ ಈ ಮಾರ್ಗದಲ್ಲಿ ಕೆಲವು ಗಂಟೆಗಳ ಕಾಲ ವಾಹನಗಳ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು. ತದ ನಂತರ ಪೊಲೀಸರು ಕ್ರೇನ್‌ನನ್ನು ಸ್ಥಳಕ್ಕೆ ತರಿಸಿ ಅಪಘಾತವಾಗಿದ್ದ ಕಾರನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.