ಬೆಂಗಳೂರು, ಫೆ.17- ಬಹುಕೋಟಿ ಐಎಂಎ ಹಗರಣದಲ್ಲಿ ಆರೋಪಿಗಳಾಗಿರುವ ಐಪಿಎಸ್ ಅಧಿಕಾರಿಗಳ ವಿರುದ್ಧವೂ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ನ ಪ್ರಶ್ನೋತ್ತರದ ವೇಳೆ ಬಿಜೆಪಿ ಸದಸ್ಯ ಎನ್,ರವಿಕುಮಾರ್ ಅವರು ವಿಷಯ ಪ್ರಸ್ತಾಪಿಸಿ, ಐಎಂಎ ಹಗರಣದಲ್ಲಿ ಕೆಳ ಹಂತದ ಅಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ. ಹಿರಿಯ ಅಧಿಕಾರಿಗಳ ವಿರುದ್ಧ ಯಾವ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ಆಕ್ಷೇಪಿಸಿದರು.
ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಅವರು, ಹಗರಣದಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. ಅವರ ವಿರುದ್ಧ ಅಭಿಯೋಜನೆಗೆ ಸಿಬಿಐ 2021ರ ಡಿಸೆಂಬರ್ 18ರಂದು ಅನುಮತಿ ಕೇಳಿತ್ತು. ಇಬ್ಬರ ವಿರುದ್ಧ ಅಭಿಯೋಜನೆಗೆ ಅದೇ ವರ್ಷ ಸೆಪ್ಟಂಬರ್ 9ರಂದು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಸದರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಶಿಫಾರಸ್ಸು ಮಾಡಲಾಗಿದೆ.
ಆರೋಪಿ ಸ್ಥಾನದಲ್ಲಿರುವ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅಭಿಯೋಜನೆಗೆ (ಪ್ರಾಸಿಕ್ಯೂಷನï)ಗೆ ಸರ್ಕಾರ ನೀಡಿರುವ ಅನುಮತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಅಲ್ಲಿ ಅನುಮತಿ ವಜಾಗೊಂಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಸುಪ್ರೀಂಕೋರ್ಟ್ ಕೆಳಹಂತದ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದೆ. ಜೊತೆಗೆ ಹೆಮಂತ್ ನಿಂಬಾಳ್ಕರ್ ವಿರುದ್ಧ 2021ರ ಫೆಬ್ರವರಿಯಲ್ಲೇ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಜೊತೆಗೆ ಹೇಮಂತ್ ನಿಂಬಾಳ್ಕರ್ ವಿರುದ್ಧ ಕೇಂದ್ರೀಯ ಆಡಳಿತ ನ್ಯಾಯ ಮಂಡಳಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಸ್ತುತ ದೋಷಾರೋಪಣಾ ಪಟ್ಟಿಗೆ ಅಧಿಕಾರಿ ತಮ್ಮ ಪ್ರತಿ ರಕ್ಷಣಾ ಹೇಳಿಕೆ ನೀಡಬೇಕಿದೆ. ಮತ್ತೊಬ್ಬ ಐಪಿಎಸ್ ಅಧಿಕಾರಿ ಅಜತ್ ಹಿಲ್ಲೇರಿ ಅವರ ಹೆಸರು ಪ್ರಕರಣದಲ್ಲಿ ಕೇಳಿ ಬಂದಿದ್ದು, ಸದರಿ ಅಧಿಕಾರಿ ವಿರುದ್ಧವೂ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ.
ಐಪಿಎಸ್ ಅಧಿಕಾರಿಯಾಗಿರುವುದರಿಂದ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಅಭಿಯೋಜನೆಗೆ ಒಳಪಡಿಸಲು 2021ರ ಜುಲೈ 26ರಂದು ಕೇಂದ್ರ ಸರ್ಕಾರದ ಅನುಮತಿಗಾಗಿ ಪತ್ರ ಬರೆಯಲಾಗಿದೆ. ಅಲ್ಲಿಂದ ಅನುಮೋದನೆ ಬಂದ ಬಳಿಕ ಕ್ರಮ ಜರುಗಿಸುತ್ತೇವೆ. ಹೇಮಂತ್ ವಿರುದ್ದ ಕೇಂದ್ರ ಸರ್ಕಾರಕ್ಕೆ ಬರೆದಿರುವ ಪತ್ರ ಪರಿಶೀಲನಾ ಹಂತದಲ್ಲಿದೆ ಎಂದು ಹೇಳಿದರು.
ಸದರಿ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ಮತ್ತು ನ್ಯಾಯಾಂಗ ಪ್ರಕರಣಗಳು ಬಾಕಿ ಇದ್ದು ಅವು ಇತ್ಯರ್ಥಗೊಂಡ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.
