Tuesday, July 16, 2024
Homeರಾಷ್ಟ್ರೀಯಹಲವು ರಾಜ್ಯಗಳಲ್ಲಿ ಭಾರೀ ಮಳೆ, ಆರೆಂಜ್‌ ಅಲರ್ಟ್‌ ಘೋಷಣೆ

ಹಲವು ರಾಜ್ಯಗಳಲ್ಲಿ ಭಾರೀ ಮಳೆ, ಆರೆಂಜ್‌ ಅಲರ್ಟ್‌ ಘೋಷಣೆ

ನವದೆಹಲಿ/ಬೆಂಗಳೂರು,ಜು.7- ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬಿಹಾರ, ಉತ್ತರಪ್ರದೇಶ, ಅಸ್ಸಾಂ, ಮೇಘಾಲಯ, ಸಿಕ್ಕಿಂ, ಮಹಾರಾಷ್ಟ್ರ, ಅರುಣಾಚಲಪ್ರದೇಶದಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.ಪಶ್ಚಿಮ ಬಂಗಾಳ, ಬಿಹಾರ, ಮಧ್ಯಮಹಾರಾಷ್ಟ್ರ ಮತ್ತು ಗುಜರಾತ್‌ನ ಕೆಲವು ಪ್ರದೇಶಗಳಲ್ಲಿ ಹಾಗೂ ಗಂಗಾ ಕರಾವಳಿ ಪ್ರದೇಶದಲ್ಲಿ ಬಿರುಗಾಳಿ ಸಹಿತ ಚಂಡಮಾರುತ ಬೀಸುವ ಎಚ್ಚರಿಕೆಯನ್ನು ನೀಡಲಾಗಿದೆ.

ಕಳೆದ ಕೆಲವು ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಡೆಹ್ರಾಡೂನ್‌ ನಲ್ಲಿ ವರುಣಾನ ಆರ್ಭಟ ಮುಂದುವರೆದಿದ್ದು, ತುಂಬಿದ ಹೊಂಡಾದಲ್ಲಿ 5 ವರ್ಷದ ಮಗುವೊಂದು ಮುಳುಗಿ ಸಾವನ್ನಪ್ಪಿದೆ.

ಹರಿದ್ವಾರದಲ್ಲಿ ಚರಂಡಿಯಲ್ಲಿ ಮುಳುಗಿ ಹದಿಹರಿಯನೊಬ್ಬ ಸಾವನ್ನಪ್ಪಿರುವುದು ವರದಿಯಾಗಿದೆ. ಮಳೆಯಿಂದಾಗಿ ಭೂಕುಸಿತ ಉಂಟಾಗಿ ಬದ್ರಿನಾಥಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಉತ್ತರಖಾಂಡ್‌ನಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇತ್ತ ರಾಜ್ಯದ ಕರಾವಳಿ, ಉತ್ತರಕನ್ನಡ, ದಕ್ಷಿಣಕನ್ನಡ ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉಡುಪಿ, ಉತ್ತರಕನ್ನಡ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ನೀಡಲಾಗಿದೆ. ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ರಾಜ್ಯದ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕಾಪು, ಬೈಂದೂರು, ಮಜಲಿ, ಭಟ್ಕಳ ಕಡಲ ತೀರದಲ್ಲಿ ಭಾರೀ ಕಡಲಕೊರೆತದ ಎಚ್ಚರಿಕೆ ನೀಡಲಾಗಿದೆ. ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ವೇಳೆ ಬೃಹತ್‌ ಅಲೆಗಳು ಉಲ್ಬಣಗೊಳ್ಳುವ ಸಾಧ್ಯತೆಯಿದೆ. ಸಮುದ್ರ ತೀರದ ಜನರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದ್ದು ಮೂರು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

RELATED ARTICLES

Latest News