ಬೆಂಗಳೂರು,ಅ.29- ಜೆಡಿಎಸ್ ಹಾಗೂ ಬಿಜೆಪಿಯಿಂದ ಹಲವು ನಾಯಕರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ. ಚನ್ನಪಟ್ಟಣದ ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಜನತಾದಳದಿಂದ 14 ಮಂದಿ ನಗರಸಭೆ ಸದಸ್ಯರು ಈ ಮೊದಲೇ ಕಾಂಗ್ರೆಸ್ ಸೇರಿದರು. ಬಿಜೆಪಿಯ 7 ಮಂದಿ ಸದಸ್ಯರ ಪೈಕಿ 6 ಮಂದಿ ಇಂದು ಸ್ವ ಇಚ್ಛೆಯಿಂದ ನಮ ಪಕ್ಷಕ್ಕೆ ಬಂದಿದ್ದಾರೆ. ಈವರೆಗೂ 27 ಜನಪ್ರತಿನಿಧಿಗಳು, ನಗರಸಭೆ ಸದಸ್ಯರು ಕಾಂಗ್ರೆಸ್ ಸೇರಿದ್ದಾರೆ ಎಂದರು.
ಅನಿರೀಕ್ಷಿತ ಬೆಳವಣಿಗೆಯಲ್ಲಿ ಸಿ.ಪಿ.ಯೋಗೇಶ್ವರ್ರವರು ಕಾಂಗ್ರೆಸ್ ಪಕ್ಷ ಸೇರಿದ್ದು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.
ಅಭಿವೃದ್ಧಿಯ ವಿಚಾರವಾಗಿ ಮುಂದಿನ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸಲಾಗುವುದು. ಗೊಂಬೆ ನಾಡನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.
ಕಳೆದ ಮೂರು ತಿಂಗಳಿನಿಂದಲೂ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಸದೃಢವಾಗಿದೆ. ಯುವಕರು, ಪ್ರಮುಖ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸರ್ಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಲ್ಲಿ ಪಾಲುದಾರರಾಗಿದ್ದಾರೆ ಎಂದರು.