ನವದೆಹಲಿ, ಜ.11- ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ಬಹುನಿರೀಕ್ಷೀತ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಫೆ.1ರಂದು ಮಂಡನೆಯಾಗಲಿದೆ. ಹಣಕಾಸು ಖಾತೆಯನ್ನು ಹೊಂದಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು, ಫೆ .1ರಂದು ಹೊಸ ಸಂಸತ್ ಭವನದಲ್ಲಿ ಬೆಳಗ್ಗೆ 11 ಗಂಟೆಗೆ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇದು ಚುನಾವಣಾ ವರ್ಷವಾಗಿರುವ ಕಾರಣ, ಪೂರ್ಣಾವಧಿ ಅಯವ್ಯಯ ಮಂಡನೆ ಮಾಡದೆ, ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ಬಳಿಕ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಲಿದ್ದಾರೆ. ಏಪ್ರಿಲ್ ಹಾಗೂ ಮೇ ತಿಂಗಳ ಮಧ್ಯ ಭಾಗದಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಈ ಬಾರಿಯ ಬಜಟ್ ನಲ್ಲಿ ಹೊಸ ಯೋಜನೆಗಳ ಘೋಷಣೆ ಮಾಡುವ ಸಾಧ್ಯತೆ ಇಲ್ಲ.
ಲೋಕಸಭೆ ಚುನಾವಣೆ ಕಸರತ್ತು, ದೆಹಲಿಗೆ ದೌಡಾಯಿಸಿದ ಸಚಿವರು
ಮಧ್ಯಂತರ ಬಜೆಟ್‍ನಲ್ಲಿ ಮಹಿಳಾ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಯನ್ನು ದ್ವಿಗುಣಗೊಳಿಸುವ ಪ್ರಸ್ತಾಪವಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಸಂಸತ್ತಿನ ಬಜೆಟ್ ಅಧಿವೇಶನವು ಜ.31 ರಿಂದ ಫೆ.9ರ ವರೆಗೆ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜ.31ರಂದು ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಈ ಬಾರಿಯ ಅಧಿವೇಶನದಲ್ಲಿ ಕೇಂದ್ರದ ಎನ್‍ಡಿಎ ಸರ್ಕಾರ ಯಾವುದೇ ಪ್ರಮುಖ ಬದಲಾವಣೆಗಳನ್ನು ಮಾಡುವ ಕಾರ್ಯಸೂಚಿಯನ್ನು ಹೊಂದಿಲ್ಲ ಎಂದು ತಿಳಿದು ಬಂದಿದೆ.