ಬೆಂಗಳೂರು, ಸೆ.24– ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಪಟ್ಟಂತೆ ನಗರದ ಪ್ರಮುಖ ಶಿಕ್ಷಣ ಸಂಸ್ಥೆಯ ಮೇಲೆ 200ಕ್ಕೂ ಹೆಚ್ಚು ಆದಾಯ ತೆರಿಗೆ ಇಲಾಖಾಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಪಿಇಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ಕರ್ನಾಟಕ ಹಾಗೂ ಆಂಧ್ರಪ್ರದೇಶದ ವಿವಿಧ ಕಾಲೇಜುಗಳ ಕಚೇರಿಗಳ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಹೊಸಕೆರೆಯಲ್ಲಿನ ಪಿಇಎಸ್ ಕಾಲೆಜು, ಎಲೆಕ್ಟ್ರಾನಿಕ್ ಸಿಟಿ ಕಾಲೇಜು, ಹನುಮಂತ ನಗರದ ಕಾಲೇಜು, ಆಂಧ್ರಪ್ರದೇಶದ ಕುಪ್ಪಂ ಕಾಲೇಜು, ಪಿಇಎಸ್ ಶಿಕ್ಷಣ ಸಂಸ್ಥೆಯ ಪೂರ್ವ ಮಾಲೀಕರಾದ ದಿವಂಗತ ದೊರೆಸ್ವಾಮಿ ಅವರ ನಿವಾಸ ಹಾಗೂ ಸಂಬಂಧಿಕರ ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.
ಶಿಕ್ಷಣ ಸಂಸ್ಥೆಯ ಜವಾಬ್ದಾರಿಯನ್ನು ಪ್ರಸ್ತುತ ನಿರ್ವಹಿಸುತ್ತಿರುವ ದೊರೆಸ್ವಾಮಿ ಅವರ ಪುತ್ರ ಜವಾಹರ್ ದೊರೆಸ್ವಾಮಿ ಅವರನ್ನು ವಿಚಾರಣೆಗೊಳಪಡಿಸಲಾಗಿದೆ. ಇಂದು ಬೆಳಗ್ಗೆ ಇನ್ನೋವಾ ಹಾಗೂ ಸ್ವಿಫ್ಟ್ ಕಾರ್‌ನಲ್ಲಿ ಆಗಮಿಸಿದ ಚೆನ್ನೈ, ಆಂಧ್ರಪ್ರದೇಶ ಹಾಗೂ ಕರ್ನಾಟಕದ 200ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ವಿವಿಧ ತಂಡಗಳಾಗಿ ಕಾರ್ಯಾಚರಣೆ ನಡೆಸಿದ್ದು, ನಿರಂತರವಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಆದಾಯ ತೆರಿಗೆ ಪಾವತಿಯಲ್ಲಿ ಅನುಮಾನಗಳು ಕಂಡು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಸಂಸ್ಥೆಯ ಲೆಕ್ಕ ಪತ್ರಗಳನ್ನು ಪರಿಶೀಲನೆಗೊಳಪಡಿಸಿರುವ ಅಧಿಕಾರಿಗಳು, ಆಡಳಿತ ಮಂಡಳಿ ಹಾಗೂ ಕಾಲೇಜಿನ ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ.ದೊರೆಸ್ವಾಮಿ ಅವರಿಗೆ ಸಂಬಂಧಪಟ್ಟಂತಹ ಆಪ್ತರು, ಸಂಬಂಧಿಕರ ಆಸ್ತಿ ವಿವರ ಹಾಗೂ ಬ್ಯಾಂಕ್ ವಹಿವಾಟುಗಳನ್ನೂ ಪರಿಶೀಲನೆಗೊಳ ಪಡಿಸಲಾಗಿದೆ.