Thursday, September 19, 2024
Homeರಾಜಕೀಯ | Politicsಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ : ಶೆಟ್ಟರ್

ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ : ಶೆಟ್ಟರ್

ಬೆಳಗಾವಿ, ಏ.5- ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತರೆ ಸಿದ್ದರಾಮಯ್ಯನವರು ಸಿಎಂ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು.

ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಕಾಂಗ್ರೆಸ್ ಸೋತರೆ ಸಿದ್ದರಾಮಯ್ಯ ಅವರಿಗೆ ಸಿಎಂ ಕುರ್ಚಿ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುವುದು ಗ್ಯಾರಂಟಿ ಎಂದು ಹೇಳಿದರು.

ಸಿದ್ದರಾಮಯ್ಯನವರು ಇದು ನನ್ನ ಕೊನೆಯ ಚುನಾವಣೆಯೆಂದು ಕಳೆದ ಹತ್ತು ವರ್ಷಗಳಿಂದ ಹೇಳುತ್ತಲೇ ಇದ್ದಾರೆ. ಈ ಬಾರಿಯೂ ಅದನ್ನೇ ಹೇಳಿದ್ದಾರೆ. ಇದು ರಾಜಕೀಯದ ಗಿಮಿಕ್ ಎಂದು ಟೀಕಿಸಿದರು.

ಬಿಜೆಪಿ ಜೊತೆಗೆ ಜೆಡಿಎಸ್ ಹೊಂದಾಣಿಕೆ ಹೊಸದೇನಲ್ಲ. ಹಿಂದೆಯೂ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ರಾಜ್ಯಮಟ್ಟದಲ್ಲಿ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಾಗಿದ್ದು, ಜಿಲ್ಲಾಮಟ್ಟದಲ್ಲೂ ಸಭೆ ನಡೆಸುತ್ತೇವೆ ಎಂದು ತಿಳಿಸಿದರು.

ಜೆಡಿಎಸ್ ಮುಖಂಡರು, ಕಾರ್ಯಕರ್ತರ ಜೊತೆಗೆ ಪ್ರಚಾರ ಆರಂಭಿಸಿದ್ದೇವೆ. ಪ್ರವಾಸದ ಸಂದರ್ಭದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಮೋದಿ ಅವರನ್ನು ಪ್ರಧಾನಿ ಮಾಡಲು ಜೆಡಿಎಸ್ನವರು ಸಹಕಾರ ನೀಡುತ್ತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಆಗಮಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.

RELATED ARTICLES

Latest News