ಗ್ರಾಪಂ ಚುನಾವಣೆ : ನಾಳೆ ಮತ್ತು ಬುಧವಾರ ಜೆಡಿಎಸ್ ಜೆಡಿಎಸ್ ಸಭೆ

ಬೆಂಗಳೂರು,ಡಿ.14- ಗ್ರಾಮಪಂಚಾಯ್ತಿ ಚುನಾವಣೆ, ಪಕ್ಷ ಸಂಘಟನೆ, ಪ್ರಚಲಿತ ರಾಜಕೀಯ ವಿದ್ಯಮಾನ ಮೊದಲಾದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ನಾಳೆ ಮತ್ತು ಬುಧವಾರ ಜೆಡಿಎಸ್ ಪ್ರಮುಖರ ಸಭೆ ನಡೆಸಲು ಉದ್ದೇಶಿಸಲಾಗಿದೆ.  ಇತ್ತೀಚೆಗೆ ಪಕ್ಷದಲ್ಲಿ ಉಂಟಾಗಿರುವ ಕೆಲವು ಗೊಂದಲಗಳನ್ನು ತಿಳಿಗೊಳಿಸುವ ಹಿನ್ನೆಲೆಯಲ್ಲಿ ಜೆಡಿಎಸ್ ಪ್ರಮುಖರ ಸಭೆ ನಡೆಸಲಾಗುತ್ತದೆ.

ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿರುವ ಕೆಲವೊಂದು ಗೊಂದಲಗಳನ್ನು ನಿವಾರಿಸುವ ಹಾಗೂ ಪಕ್ಷದ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಸಭೆ ನಡೆಸಲಾಗುತ್ತದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಪಕ್ಷದ ಪ್ರಮುಖರ ಸಭೆ ನಡೆಯಲಿದೆ. ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಗ್ರಾಮಪಂಚಾಯ್ತಿ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಪ್ರಮುಖರಿಗೆ ಉಸ್ತುವಾರಿಯನ್ನು ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.  ಭೂ ಸುಧಾರಣೆ ತಿದ್ದುಪಡಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಉಂಟಾಗಿರುವ ಗೊಂದಲವನ್ನು ಬಗೆಹರಿಸಿ ಜೆಡಿಎಸ್ ನಿಲುವು ಏನು ಎಂಬುದನ್ನು ಪ್ರಮುಖರಿಗೆ ಮನವರಿಕೆ ಮಾಡಿಕೊಡಲಾಗುತ್ತದೆ.

ಅಲ್ಲದೆ ಈ ವಿಚಾರದಲ್ಲಿ ಕಾರ್ಯಕರ್ತರು ಹಾಗೂ ಜನರಲ್ಲಿ ಮೂಡಿರುವ ಅಸಮಾಧಾನ ತಿಳಿಗೊಳಿಸಲು ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುತ್ತದೆ.  ಗೋಹತ್ಯೆ ನಿಷೇಧ ವಿಧೇಯಕಕ್ಕೆ ಜೆಡಿಎಸ್ ಮೊದಲಿನಿಂದಲೂ ವಿರೋಧ ಮಾಡುತ್ತಾ ಬಂದಿದ್ದು, ಈಗಲೂ ಮುಂದುವರೆಸುವ ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ.

ಈ ಎರಡು ವಿಧೇಯಕಗಳ ವಿಚಾರದಲ್ಲಿ ಪಕ್ಷದ ನಿಲುವು ಏನು ಎಂಬುದನ್ನು ಶಾಸಕರು, ಮಾಜಿ ಸಚಿವರು, ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದಲೇ ಗೌಡರು ಸಭೆಯನ್ನು ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಕ್ಷ ಸಂಘಟನೆಗೆ ಎಲ್ಲರೂ ಒತ್ತುಕೊಡಬೇಕು. ತಳಮಟ್ಟದಿಂದ ಪಕ್ಷ ಸಂಘಟನೆಯಾಗಿ ಮುಂಬರುವ ಚುನಾವಣೆಗಳ ತಯಾರಿ ಸಂಘಟನೆಗಳೊಂದಿಗೆ ಮಾಡಬೇಕು. ಆ ನಿಟ್ಟಿನಲ್ಲಿ ಮಾಡಬೇಕಾದ ಕಾರ್ಯತಂತ್ರ, ರೂಪಿಸಬೇಕಾದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ.