ಬೆಂಗಳೂರು, ಜ.15- ರಾಜ್ಯದಲ್ಲಿ ತೀವ್ರವಾಗಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಮುಂದಿನ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯನ್ನು ಮುಂದೂಡಲಾಗಿದೆ. 2023ರ ವಿಧಾನಸಭೆ ಚುನಾವಣೆಗೆ ಸ್ರ್ಪಧಿಸಲಿರುವ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ಮಾಡಲಾಗಿತ್ತು.
ಪ್ರಾಥಮಿಕ ಹಂತದ ಪಟ್ಟಿಯನ್ನು ಸಿದ್ಧಗೊಳಿಸಿ ಬಿಡುಗಡೆ ಮಾಡುವ ಮುನ್ನ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿತ್ತು. ಆದರೆ, ಕಳೆದ ಎರಡು ವಾರಗಳಿಂದ ನಿರಂತರವಾಗಿ ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವುದರಿಂದ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಕೋವಿಡ್ ಸೋಂಕಿನ ಪ್ರಮಾಣ ಇಳಿಕೆಯಾಗಿ ಜನಜೀವನ ಸಹಜ ಸ್ಥಿತಿಗೆ ಮರಳಿದ ನಂತರ ಪಟ್ಟಿ ಬಿಡುಗಡೆ ಮಾಡಲು ವರಿಷ್ಠರು ಉದ್ದೇಶಿಸಿದ್ದಾರೆ. ಶಿವರಾತ್ರಿ ಹಬ್ಬದ ಬಳಿಕ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ಬಳಿಯ ತೋಟದಲ್ಲಿ ಕಾರ್ಯಾಗಾರ ನಡೆಸಿ ಸ್ಪರ್ಧಾಕಾಂಕ್ಷಿಗಳಿಗೆ ಪ್ರಶ್ನಾವಳಿಗಳನ್ನು ನೀಡಲಾಗಿತ್ತು. ಅವರು ಪ್ರಶ್ನಾವಳಿಗಳಿಗೆ ತಕ್ಕಂತೆ ಪಕ್ಷ ಸಂಘಟನೆ ಕೈಗೊಂಡು ಉತ್ತರವನ್ನೂ ನೀಡಿದ್ದರು. ಆ ಉತ್ತರಗಳು ಮೌಲ್ಯಮಾಪನವಾಗಿದ್ದು, ಅಭ್ಯರ್ಥಿಗಳ ಆಯ್ಕೆ ಅಂತಿಮ ಘಟ್ಟ ತಲುಪಿತ್ತು ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಸಿದ್ಧಪಡಿಸಲಾಗಿರುವ ಪ್ರಾಥಮಿಕ ಪಟ್ಟಿಯ ಬಗ್ಗೆ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಒಪ್ಪಿಗೆ ಪಡೆದು ಬಿಡುಗಡೆ ಮಾಡಲು ಉದ್ದೇಶಿಸಲಾಗಿತ್ತು.
ರಾಜ್ಯದ ಪ್ರಮುಖ ಜೀವನದಿಗಳ ಜಲವನ್ನು ತಂದು ನಗರದಲ್ಲಿ ಪೂಜಿಸುವ ಮಹತ್ವದ ಜಲಧಾರೆ ಯೋಜನೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನವರಿ 26ರಿಂದ ಈ ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಆದರೆ, ಕೋವಿಡ್ ಸೋಂಕಿನ ಪ್ರಮಾಣ ಇಳಿಕೆಯಾಗದಿದ್ದರೆ ಈ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗುತ್ತದೆ.
ಜಲಧಾರೆ ಯೋಜನೆ ಸಂದರ್ಭದಲ್ಲಿ ರಾಜ್ಯದ 10 ಕಡೆಗಳಲ್ಲಿ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಪಕ್ಷದ ನಾಯಕರು ಒತ್ತು ಕೊಡಲಿದ್ದಾರೆ. ಪಕ್ಷ ಎಲ್ಲಿ ದುರ್ಬಲವಾಗಿದೆಯೋ ಆ ಕಡೆಗಳಲ್ಲಿ ಮೊದಲ ಆದ್ಯತೆ ನೀಡಿ ಪಕ್ಷವನ್ನು ತಳಮಟ್ಟದಿಂದ ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
