ಬೆಂಗಳೂರು, ಫೆ.4- ರಾಜ್ಯಸಭೆ, ಲೋಕಸಭೆ ಚುನಾವಣೆ ಸಿದ್ಧತೆ, ಪಕ್ಷದ ಪದಾಧಿಕಾರಿಗಳ ನೇಮಕ, ವಿಧಾನ ಮಂಡಲದ ಅಧಿವೇಶನ ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಕುರಿತು ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲು ನಾಳೆ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದೆ.
ಜೆ.ಪಿ.ಭವನದಲ್ಲಿ ನಾಳೆ ಮಧ್ಯಾಹ್ನ ಕೋರ್ ಕಮಿಟಿ ಅಧ್ಯಕ್ಷರಾದ ಮಾಜಿ ಸಚಿವ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿಈ ಸಭೆ ನಡೆಯಲಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಖಾಲಿ ಇರುವ ಜಿಲ್ಲಾಧ್ಯಕ್ಷರ ನೇಮಕ, ರಾಜ್ಯ ಪದಾಧಿಕಾರಿಗಳ ನೇಮಕದ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಇತ್ತೀಚೆಗೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದ್ದರೂ ಅಂತಿಮ ನಿರ್ಣಯ ಕೈಗೊಂಡಿರಲಿಲ್ಲ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ರ್ಪಧಿಸಿದ್ದ ಎ.ಪಿ.ರಂಗನಾಥ್ ಅವರ ಗೆಲುವಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸುವ ಬಗ್ಗೆ ಮಾರ್ಗದರ್ಶನ ಮಾಡಲಾಗುತ್ತದೆ.
ಅದೇ ರೀತಿ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಹಾಗೂ ಬೆಂಬಲಿಸುವ ಕುರಿತಂತೆ ಸಮಾಲೋಚನೆ ನಡೆಸಲಾಗುತ್ತದೆ. ಮುಂಬರುವ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಿದ್ದು, ಶಾಸಕರು ಹಾಗೂ ಮುಖಂಡರಿಗೆ ಕೆಲವು ಜವಾಬ್ದಾರಿಗಳನ್ನು ವಹಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಕೋಲ್ಕತಾಗೆ ಶೀಘ್ರರೈಲು ಸಂಪರ್ಕ : ಸಿಎಂ ಮಾಣಿಕ್ ಸಹಾ
ಎನ್‍ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿರುವುದರಿಂದ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಈಗಿನಿಂದಲೇ ಶ್ರಮ ವಹಿಸಿ ಕೆಲಸ ಮಾಡುವ ಬಗ್ಗೆ ಮಾರ್ಗದರ್ಶನ ಮಾಡಲಾಗುತ್ತದೆ. ವಿಧಾನಮಂಡಲದ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ಜನಪರ ಧ್ವನಿ ಎತ್ತಲು ಗಂಭೀರ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ಹೇಳಿವೆ.