ಬೆಂಗಳೂರು,ಜ.20- ಜೆಡಿಎಸ್‍ನ ಕೋರ್‍ಕಮಿಟಿ ಪಟ್ಟಿ ಹಾಗೂ ರಾಜ್ಯ ಮಟ್ಟದ ಪದಾಕಾರಿಗಳ ಪಟ್ಟಿ ಮುಂದಿನ ವಾರ ಪ್ರಕಟವಾಗುವ ಸಾಧ್ಯತೆ ಇದೆ.ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಕೋರ್‍ಕಮಿಟಿ ಸದಸ್ಯರ ಆಯ್ಕೆ ಹಾಗೂ ಪದಾಕಾರಿಗಳ ಪುನರ್ ನೇಮಕದ ಬಗ್ಗೆ ಗಂಭೀರ ಚರ್ಚೆಯಾಗಿದೆ.
ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಕೆ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಆಯ್ದ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.ವಿಭಾಗ ಮಟ್ಟದ ಪದಾಕಾರಿಗಳೂ ಸೇರಿದಂತೆ ಪಕ್ಷವನ್ನು ಪುನರ್ ಸಂಘಟನೆ ಮಾಡಲು ನಿರ್ಧರಿಸಲಾಗಿದೆ. ಮುಂದಿ ವಾರ ರಾಜ್ಯ ಮಟ್ಟದ ವಿವಿಧ ಪದಾಕಾರಿಗಳ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಕೋರ್‍ಕಮಿಟಿ ಸದಸ್ಯರ ಆಯ್ಕೆ ಬಹುತೇಕ ಪೂರ್ಣಗೊಂಡಿದ್ದು, ಈ ಪಟ್ಟಿಯನ್ನು ವರಿಷ್ಠರು ಮುಂದಿನ ವಾರ ಅಕೃತವಾಗಿ ಪ್ರಕಟಿಸುವ ಸಂಭವವಿದೆ. ಸುಮಾರು 20 ಪ್ರಮುಖರು ಕೋರ್‍ಕಮಿಟಿಯಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಮೂಲಗಳು ಹೇಳಿವೆ.
ನಿರಂತರವಾಗಿ ಹೆಚ್ಚಳವಾಗುತ್ತಿರುವ ಕೋವಿಡ್ ಮೂರನೆ ಅಲೆಯಿಂದಾಗಿ ಪಕ್ಷದ ಮಹತ್ವದ ಕಾರ್ಯಕ್ರಮವಾದ ಜನತಾ ಜಲಧಾರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಸಲಾಗಿದೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲು ರೂಪುರೇಷೆ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ. ಕೋವಿಡ್ ಪ್ರಮಾಣ ಗಣನೀಯವಾಗಿ ಇಳಿಕೆಯಾದ ನಂತರ ಚಾಲನೆ ನೀಡುವುದು, ಫೆಬ್ರವರಿ ಇಲ್ಲವೇ ಮಾರ್ಚ್‍ನಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಬಗ್ಗೆ ತೀರ್ಮಾನಿಸಲಾಗಿದೆ.
ಅದೇ ರೀತಿ 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಸ್ವಂತ ಬಲದ ಮೇಲೆ ಅಕಾರ ತರುವ ಗುರಿ ಹೊಂದಿದ್ದು, ಅದನ್ನು ಕಾರ್ಯಗತಗೊಳಿಸಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಸಂಕ್ರಾಂತಿ ಸಂದರ್ಭದಲ್ಲಿ ಪ್ರಕಟಿಸಲು ಉದ್ದೇಶಿಸಲಾಗಿದ್ದ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಮುಂಬರುವ ತಾಪಂ, ಜಿಪಂ, ಬಿಬಿಎಂಪಿ ಸೇರಿದಂತೆ ಎಲ್ಲಾ ಚುನಾವಣೆಗಳನ್ನೂ ಪಕ್ಷ ಗಂಭೀರವಾಗಿ ಪರಿಗಣಿಸುವ ಬಗ್ಗೆಯೂ ಸಮಾಲೋಚಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
