ನಾಳೆ ಜೆಡಿಎಸ್ ಶಾಸಕಾಂಗ ಸಭೆ

Social Share

ಬೆಂಗಳೂರು,ಮಾ.3- ರಾಜ್ಯ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಯಲಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಭೆ ನಡೆಯಲಿದೆ.
ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಎಲ್ಲಾ ಶಾಸಕರು ಪಾಲ್ಗೊಳ್ಳಲಿದ್ದಾರೆ. ಸಭೆಗೆ ಹಾಜರಾಗುವಂತೆ ಪಕ್ಷದ ಸಚೇತಕರಾದ ವೆಂಕಟರಾವ್ ನಾಡಗೌಡ ಅವರು ಶಾಸಕರಿಗೆ ಪತ್ರ ಬರೆದಿದ್ದಾರೆ.
ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಯಾವ ವಿಚಾರಗಳಿಗೆ ಆದ್ಯತೆ ನೀಡಿ ಪ್ರಸ್ತಾಪಿಸಬೇಕು, ಇತ್ತೀಚಿನ ರಾಜಕೀಯ ವಿದ್ಯಮಾನಗಳು, ಪಕ್ಷ ಸಂಘಟನೆ ಮೊದಲಾದ ವಿಚಾರಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುತ್ತದೆ.
ಕಳೆದ ಜಂಟಿ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ವಿಚಾರಗಳನ್ನು ಪ್ರಸ್ತಾಪಿಸಲು ಜೆಡಿಎಸ್ ಸಿದ್ದವಿತ್ತು. ಆದರೆ, ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸಿದ್ದರಿಂದ ಸದನದ ಕಾರ್ಯಕಲಾಪಗಳು ಸುಗಮವಾಗಿ ನಡೆಯಲಿಲ್ಲ. ಅಲ್ಲದೆ, ನಿಗದಿತ ಅವಗಿಂತ ಮೂರು ದಿನ ಮೊದಲೇ ಅಧಿವೇಶನ ಮೊಟಕುಗೊಂಡಿತ್ತು. ಹೀಗಾಗಿ ಯಾವುದೇ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಲು ಜೆಡಿಎಸ್‍ಗೆ ಅವಕಾಶ ಸಿಕ್ಕಿರಲಿಲ್ಲ.
ಈ ಅಧಿವೇಶನದಲ್ಲಿ ರಾಜ್ಯದ ನೀರಾವರಿ ಯೋಜನೆಗಳಾದ ಮೇಕೆದಾಟು, ಮಹಾದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ಮೊದಲಾದವುಗಳ ಬಗ್ಗೆ ಪ್ರಮುಖವಾಗಿ ಜೆಡಿಎಸ್ ಪ್ರಸ್ತಾಪಿಸಲು ಉದ್ದೇಶಿಸಿದೆ.
ಕೋವಿಡ್‍ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ನೀಡಿಕೆ ವಿಳಂಬ, ಅತಿವೃಷ್ಟಿ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಪರಿಹಾರ ನೀಡಿಕೆ ವಿಳಂಬ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ನೀಡಿಕೆಯಲ್ಲಿ ತಾರಮ್ಯ ಸೇರಿದಂತೆ ಮೊದಲಾದ ಪ್ರಮುಖ ವಿಚಾರಗಳ ಬಗ್ಗೆ ಆದ್ಯತೆ ಮೇಲೆ ಪ್ರಸ್ತಾಪಿಸುವುದಲ್ಲದೆ, ರಾಜ್ಯದ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲು ಉದ್ದೇಶಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Articles You Might Like

Share This Article