ಜ.4ಕ್ಕೆ ಜೆಡಿಎಸ್‍ಸಂಘಟನಾ ಸಭೆ

ಬೆಂಗಳೂರು,ಜ.2- ಗ್ರಾಮಪಂಚಾಯ್ತಿ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಪಕ್ಷ ಸಂಘಟನೆಗೆ ಒತ್ತು ನೀಡಿರುವ ಜೆಡಿಎಸ್ ಜ.4ರಂದು ಯುವ ಹಾಗೂ ವಿದ್ಯಾರ್ಥಿ ಜನತಾದಳದ ಮುಖಂಡರ ಸಂಘಟನಾ ಸಭೆ ನಡೆಸಲಿದೆ.  ನಗರದಲ್ಲಿರುವ ಜೆಡಿಎಸ್ ಕಚೇರಿ ಜೆಪಿಭವನದಲ್ಲಿ ಯುವ ಹಾಗೂ ವಿದ್ಯಾರ್ಥಿ ಜೆಡಿಎಸ್ ವಿಭಾಗಗಳ ರಾಜ್ಯ ಜಿಲ್ಲಾ , ತಾಲ್ಲೂಕು ಘಟಕದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಯುವ ಮುಖಂಡರ ಸಂಘಟನಾ ಸಭೆಗೆ ಆಹ್ವಾನಿಸಲಾಗಿದೆ.

ಸಭೆಯಲ್ಲಿ ಇತ್ತೀಚೆಗೆ ನಡೆದ ಚುನಾವಣಾ ಫಲಿತಾಂಶ ಹಾಗೂ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿ ಪಕ್ಷವನ್ನು ತಳಮಟ್ಟದಿಂದ ಬಲಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.  ಈ ಸಂಬಂಧ ಯುವ ಹಾಗೂ ವಿದ್ಯಾರ್ಥಿ ಜನತಾದಳದ ಎಲ್ಲ ಘಟಕಗಳಿಗೆ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಕೆ.ಕುಮಾರಸ್ವಾಮಿ, ಯುವ ಜೆಡಿಎಸ್ ರಾಜ್ಯಾಧ್ಯಕ್ಷರಾದ ನಿಖಿಲ್‍ಕುಮಾರಸ್ವಾಮಿ ಅವರು ಜಂಟಿ ಪತ್ರ ಬರೆದು ಸಭೆಗೆ ಹಾಜರಾಗುವಂತೆ ಆಹ್ವಾನ ನೀಡಿದ್ದಾರೆ.

ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡ ನಂತರ ರಾಜ್ಯ ರಾಜಕೀಯದಲ್ಲಿ ಆಗಿರುವ ಬದಲಾವಣೆಗಳು, ಆಡಳಿತಾರೂಢ ಬಿಜೆಪಿ ಸರ್ಕಾರದ ಆಡಳಿತ ವೈಖರಿ, ರೈತರು ಮತ್ತು ಕೂಲಿ ಕಾರ್ಮಿಕರ ಸಂಕಷ್ಟ ಮೊದಲಾದ ವಿಷಯಗಳು ಸಭೆಯಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗಲಿವೆ.

ಇತ್ತೀಚೆಗೆ ನಡೆದ ರಾಜರಾಜೇಶ್ವರಿನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಾಗೂ ವಿಧಾನಪರಿಷತ್ 4 ಸ್ಥಾನಗಳ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆ ಬಗ್ಗೆಯೂ ಗಂಭೀರ ಚರ್ಚೆ ನಡೆಸಿ ಎಲ್ಲ ಹಂತಗಳಲ್ಲೂ ಪಕ್ಷ ಸಂಘಟನೆ ಹಾಗೂ ಬಲವರ್ಧನೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರು ಪಾಲ್ಗೊಂಡು, ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಯುವ ಮುಖಂಡರು ಹಾಗೂ ವಿದ್ಯಾರ್ಥಿ ಮುಖಂಡರು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಅವಶ್ಯಕವಾಗಿರುವುದರಿಂದ ಸಲಹೆ ಮತ್ತು ಮಾರ್ಗದರ್ಶನ ನೀಡಲು ಸಭೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.