ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಜೆಡಿಎಸ್ ಪೂರ್ವಭಾವಿ ಸಭೆ

ಬೆಂಗಳೂರು, ಜೂ. 26-ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಜೆಡಿಎಸ್ ನಗರದಲ್ಲಿ ಸೋಮವಾರ ನಡೆಸಲಿರುವ ಪ್ರತಿಭಟನೆಯ ಪೂರ್ವಭಾವಿ ಸಭೆ ಇಂದು ನಡೆಯಿತು‌. ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿ ಪ್ರತಿಭಟನೆಯ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಇ‌ಕೃಷ್ಣಪ್ಪ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಮತ್ತಿತರ ಮುಖಂಡರು ಭಾಗಿಯಾಗಿದ್ದರು. ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಹೆಚ್.ಕೆ ಕುಮಾರಸ್ವಾಮಿ, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿವೆ. ದಿನೇ ದಿನೇ ತೈಲ ಬೆಲೆ ಗಗನಕ್ಕೇರಿದೆ. ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.‌ ಇದರ ವಿರುದ್ಧ ನಮ್ಮ ಪಕ್ಷವು ಹೋರಾಟ ನಡೆಸಲಿದೆ ಎಂದರು.

ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಅಂದು ಬೆಳಗ್ಗೆ 11ಗಂಟೆಗೆ ಜೆಪಿ ಭವನದಿಂದ ಮೌರ್ಯವೃತ್ತದ ಮಹಾತ್ಮ ಗಾಂಧೀಜಿ ಪ್ರತಿಮೆವರೆಗೂ ಪಾದಯಾತ್ರೆ ನಡೆಸುತ್ತೇವೆ. ಬಳಿಕ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡುತ್ತೇವೆ ಎಂದು ಅವರು ಹೇಳಿದರು‌.

ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಯಲಿದೆ. ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕೊರೊನಾ ಸಮಯದಲ್ಲಿ ಜನರು ಆರ್ಥಿಕವಾಗಿ, ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಜನರ ಮೇಲೆ ಹೊರೆ ಹೊರಿಸಲಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿರುತ್ತದೆ ಎಂದ ಅವರು, ಕಾಂಗ್ರೆಸ್, ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಕಿತ್ತಾಟ ಆರಂಭವಾಗಿದೆ. ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತಾಗಿದೆ. ಚರ್ಚೆ ಮಾಡುವ ಸಂದರ್ಭವೇ ಇದು ಅಲ್ಲ. ಬಿಜೆಪಿ ಬಗ್ಗೆ ನಮಗೆ ಯಾವುದೇ ಸಾಫ್ಟ್ ಕಾರ್ನರ್ ಇಲ್ಲ. ರಾಜ್ಯಕ್ಕೆ ಜೆಡಿಎಸ್ ಕೊಡುಗೆ ಅಪಾರವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತೇವೆ. ನಾವು ಕ್ವಾರಂಟೇನ್ ನಲ್ಲಿ ಇಲ್ಲ. ಬೀದಿಗಿಳಿದು ಹೋರಾಟ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.