2023ರಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ, ನಾಳೆಯಿಂದ 4 ಸರಣಿ ಕಾರ್ಯಾಗಾರ

ಬೆಂಗಳೂರು,ಸೆ.26- ಮುಂಬರುವ 2023ರ ವಿಧಾನಸಭೆ ಚುನಾವಣೆಯನ್ನು ಗುರಿ ಇಟ್ಟುಕೊಂಡಿರುವ ಜೆಡಿಎಸ್, ನಾಳೆಯಿಂದ ನಾಲ್ಕು ದಿನಗಳ ಕಾಲ ಸರಣಿ ಕಾರ್ಯಾಗಾರ ನಡೆಸುವ ಮೂಲಕ ರಾಜ್ಯದಲ್ಲಿ ತೃತೀಯ ಶಕ್ತಿಯಾಗಿ ಹೊರಹೊಮ್ಮಲು ಸಕಲ ಸಿದ್ಧತೆ ಮಾಡಿಕೊಳ್ಳಲು ಮುಂದಾಗಿದೆ.

ಬಿಡದಿ ಬಳಿಯ ಕೇತಗಾನಹಳ್ಳಿಯ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ನಾಳೆಯಿಂದ ಸೆ.30ರವರೆಗೂ ನಿರಂತರ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಜನತೆಗೆ ಮೂಲ ಸೌಕರ್ಯ ಕಲ್ಪಿಸಲು ರೂಪಿಸಿರುವ ಅಭಿವೃದ್ದಿ ಕಾರ್ಯಕ್ರಮಗಳನ್ನು ವಾಸ್ತವಿಕವಾಗಿ ಅನುಷ್ಠಾನಗೊಳಿಸಲು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಅಂತಿಮ ರೂಪುರೇಷೆಗಳನ್ನು ನಿರೂಪಿಸುವ ಉದ್ದೇಶದಿಂದ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ.

ವಿವಿಧ ಹಂತದಲ್ಲಿ ಪಕ್ಷವನ್ನು ಸಂಘಟಿಸಿ ಬಲಗೊಳಿಸಲು ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಹುರಿದುಂಬಿಸಲು ಉದ್ದೇಶಿಸಿದ್ದು, ನಾಳೆ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಕಳೆದ ವಿಧಾನಸಭೆ, ವಿಧಾನಪರಿಷತ್‍ನ ಚುನಾವಣೆಯಲ್ಲಿ ಸ್ಪರ್„ಸಿದ್ದ ಅಭ್ಯರ್ಥಿಗಳು ಪಕ್ಷದ ಎಲ್ಲ ಘಟಕದ ಅಧ್ಯಕ್ಷರಿಗೆ ನಾಳೆ ಮತ್ತು ಮಂಗಳವಾರ ಕಾರ್ಯಾಗಾರ ಹಮ್ಮಿಕೊಂಡಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಉದ್ಘಾಟಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಸೆ.29ರಂದು ಮಹಿಳಾ ಮುಖಂಡರ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ನೀಡುವ ಪ್ರಾತಿನಿಧ್ಯ ಕುರಿತು ಚರ್ಚಿಸಲಾಗುತ್ತದೆ. ಜೊತೆಗೆ ಎಲ್ಲ ಹಂತದಲ್ಲಿ ಪಕ್ಷವನ್ನು ಸಂಘಟಿಸುವುದು, ಮುಂಬರುವ ಪಂಚಾಯತ್‍ರಾಜ್, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳಾ ಮುಖಂಡರು ಸಕ್ರಿಯವಾಗಿ ಸ್ಪರ್„ಸಲು ಮಾರ್ಗದರ್ಶನ ಮಾಡಲಾಗುತ್ತದೆ.

ಸೆ.30ರಂದು ಯುವ ಕಾರ್ಯಾಗಾರ ಹಮ್ಮಿಕೊಂಡಿದ್ದು, ಅದರಲ್ಲಿ ವಿದ್ಯಾರ್ಥಿ ಜನತಾದಳ ಸೇರಿದಂತೆ ಜೆಡಿಎಸ್ ಮುಖಂಡರಿಗೆ ಕಾರ್ಯಾಗಾರ ನಡೆಸಲಾಗುತ್ತಿದೆ. ಎಲ್ಲ ಹಂತದಲ್ಲಿ ಪಕ್ಷವನ್ನು ಬಲಗೊಳಿಸಲು ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳುವ ಬಗ್ಗೆ ಮಾರ್ಗದರ್ಶನವನ್ನು ವರಿಷ್ಠರು ಮಾಡಲಿದ್ದಾರೆ.

ಈ ಸಂಬಂಧ ಜಂಟಿ ಪತ್ರ ಬರೆದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಹಾಗೂ ಜೆಡಿಎಸ್ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರು, ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪಕ್ಷದ ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿ ಬಲಗೊಳಿಸುವ ಉದ್ದೇಶದಿಂದ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪ್ರಚಲಿತ ಪ್ರಮುಖ ವಿಷಯ ಮತ್ತು ಸಮಸ್ಯೆಗಳ ಬಗ್ಗೆ ಚಿಂತನೆ ನಡೆಸಲಿದ್ದು, ಬೇರೆ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಸ್ವಂತ ಬಲದ ಮೇಲೆ ಅ„ಕಾರಕ್ಕೆ ಬಂದಿರುವುದನ್ನು ಮುಂದಿಟ್ಟುಕೊಂಡು ಕಾರ್ಯಾಗಾರವನ್ನು ಮಾಡಲಾಗುತ್ತಿದೆ.

ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಕನ್ನಡ ನೆಲಜಲ ಮತ್ತು ಪ್ರಾದೇಶಿಕತೆಗೆ ಪ್ರಾಮುಖ್ಯತೆ ನೀಡುವ ಗುರಿಯನ್ನು ಹೊಂದಿದ್ದು, ಪಂಚಸೂತ್ರಗಳನ್ನು ಈಗಾಗಲೇ ರೂಪಿಸಲಾಗಿದೆ. ಈ ನಿಟ್ಟಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಕಾ ಕಾರ್ಯತಂತ್ರ ರೂಪಿಸುತ್ತಿದ್ದು, ಮನೆ ಬಾಗಿಲಿಗೇ ಪಕ್ಷದ ಕಾರ್ಯಕರ್ತರನ್ನು ಬರಮಾಡಿಕೊಂಡು ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿಗೆ ರಾಜ್ಯವನ್ನು ಎರಡು ರಾಷ್ಟ್ರೀಯ ಪಕ್ಷಗಳು ನಿರ್ಲಕ್ಷ್ಯ ಮಾಡುವೆ. ಜೆಡಿಎಸ್ ಕನ್ನಡಿಗರ ಏಕೈಕ ಆಯ್ಕೆಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷದ ಮುಂದಿರುವ ಆಯ್ಕೆಗಳು ಹಾಗೂ ಸವಾಲುಗಳು, ಅವುಗಳ ಪರಿಹಾರದ ಬಗ್ಗೆಯೂ ಅವರು ಚರ್ಚೆ ನಡೆಸಿ ಸೂಚನೆಗಳನ್ನು ನೀಡಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.