ಬೆಂಗಳೂರು,ಫೆ.2- ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ವಿರುದ್ಧ ದೂರು ನೀಡಿತು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರು ಮತ ನೀಡದಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ತಮ್ಮ ಪಕ್ಷದೊಂದಿಗೆ ಚರ್ಚಿಸು ವುದಾಗಿ ಬಾಲಕೃಷ್ಣ ಅವರು ಹೇಳಿಕೆ ನೀಡಿರುವುದು ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಸ್ಪಷ್ಟ ಪ್ರಕರಣವಾಗಿದೆ ಎಂದು ಜೆಡಿಎಸ್ ತನ್ನ ದೂರಿನಲ್ಲಿ ಆರೋಪಿಸಿದೆ.
ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಬಾಲಕೃಷ್ಣ ಅವರು ಜನತಾ ಪ್ರಾತಿನಿಧ್ಯ ಕಾಯ್ದೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ ಎಂದು ದೂರು ಸಲ್ಲಿಸಿದ ನಂತರ ನಿಖಿಲ್ ಕುಮಾರಸ್ವಾಮಿ ಅವರು ಸುದ್ದಿಗಾರರಿಗೆ ತಿಳಿಸಿದರು.
ಅಲ್ಲದೆ, ಎಚ್.ಸಿ.ಬಾಲಕೃಷ್ಣ ಅವರ ಹೇಳಿಕೆಯು ನಮ್ಮ ಸಂವಿಧಾನ ಮತ್ತು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸಂಪೂರ್ಣ ಉಲ್ಲಂಘನೆಯಾಗಿದೆ. ಮುಖ್ಯ ಚುನಾವಣಾಧಿಕಾರಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‍ನ ಮಾನ್ಯತೆಯನ್ನು ರದ್ದು ಮಾಡಲು ಒತ್ತಾಯಿಸಿದ್ದೇವೆ ಎಂದರು.
ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಸೇರಿದಂತೆ ಪಕ್ಷದ ಉನ್ನತ ನಾಯಕತ್ವದ ಪೂರ್ವಾನುಮತಿ ಇಲ್ಲದೆ ಅವರು ಯಾವುದೇ ಹೇಳಿಕೆ ನೀಡಿರುವ ಸಾಧ್ಯತೆ ಇಲ್ಲ. ಇಂತಹ ವರ್ತನೆಯನ್ನು ಜೆಡಿಎಸ್ ಮತ್ತು ಕರ್ನಾಟಕದ ಜನತೆ ಸಹಿಸುವುದಿಲ್ಲ ಎಂದು ಅವರು ಆರೋಪ ಮಾಡಿದರು.
ಕಾಂಗ್ರೆಸ್ ದೇಶ ವಿರೋಧಿ ಮತ್ತು ಕರ್ನಾಟಕ ವಿರೋಧಿ ಪಕ್ಷ. ಸಾರ್ವಜನಿಕರು ಕಾಂಗ್ರೆಸ್ಸಿಗರ ನಿಜವಾದ ಗುಣವನ್ನು ಅರ್ಥಮಾಡಿಕೊಂಡಿದ್ದಾರೆ. ಹಾಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಗೆ ಮತ ಹಾಕಲು ಹೋಗುವುದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಈಗಾಗಲೇ ಅರಿವಾಗಿದೆ. ಮುಂಬರುವ ಚುನಾವಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಭರ್ಜರಿ ಗೆಲುವು ಸಾಧಿಸುವುದು ಖಚಿತ. ಹತಾಶೆಯಿಂದ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಸಂಸದ ಡಿ.ಕೆ.ಸುರೇಶ್ ಅವರು ನೀಡಿರುವ ಹೇಳಿಕೆ ದೇಶದ ಸಾರ್ವಭೌಮತೆಗೆ ವಿರುದ್ಧವಾಗಿದೆ ಮತ್ತು ಅವರನ್ನು ಸುಳ್ಳು ಸುದ್ದಿ ಹರಡಿದ ಹಿನ್ನೆಲೆಯಲ್ಲಿ ದೇಶದ ಕಾನೂನು ವ್ಯಾಪ್ತಿಯಲ್ಲಿ ವಿಚಾರಣೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದರು.
ಜೆಡಿಎಸ್ ಶಾಸಕರಾದ ಸುರೇಶ್ ಬಾಬು, ಕರೆಮ್ಮ ನಾಯಕ್, ಹೆಚ್.ಟಿ.ಮಂಜುನಾಥ, ಜಿ.ಡಿ.ಹರೀಶ್ ಗೌಡ, ಸ್ವರೂಪ್ ಪ್ರಕಾಶ್, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ, ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಅಭ್ಯರ್ಥಿ ಎ.ಪಿ.ರಂಗನಾಥ ,ಮುಖಂಡರು ನಿಯೋಗದಲ್ಲಿದ್ದರು.