ಬೆಂಗಳೂರು,ಆ.21- ಜೆಡಿಎಸ್‍ನ ಮಹತ್ವಾಕಾಂಕ್ಷೆಯ ಪಂಚರತ್ನ ಕಾರ್ಯಕ್ರಮ ಸೆಪ್ಟೆಂಬರ್ 10ರಿಂದ ಆರಂಭವಾಗುವ ಸಾಧ್ಯತೆಗಳಿವೆ. ಮೈಸೂರಿನ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಜೆಡಿಎಸ್ ವರಿಷ್ಠರು ತೀರ್ಮಾನಿಸಿದ್ದಾರೆ.
ಇತ್ತೀಚೆಗೆ ನಡೆಸಿದ ಜನತಾ ಜಲಧಾರೆ ಮಾದರಿಯಂತೆ ಪಂಚರತ್ನ ಕಾರ್ಯಕ್ರಮವನ್ನು ರಾಜ್ಯದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಎಲ್ಲ ಪ್ರಮುಖ ನಾಯಕರು ಪಂಚರತ್ನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಎಲ್ಲ ಜಿಲ್ಲೆ ಹಾಗೂ ಎಲ್ಲ ಕ್ಷೇತ್ರಗಳಲ್ಲೂ ಈ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಿದ್ದು, ರೂಟ್ ಮ್ಯಾಪ್ ಸಿದ್ದಪಡಿಸಲಾಗುತ್ತಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕೆಂಬ ಗುರಿ ಹೊಂದಿದೆ. ಆಮೂಲಕ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಬೇಕೆಂಬ ಮಹದಾಸೆಯನ್ನು ಜೆಡಿಎಸ್ ಹೊಂದಿದೆ.
ಜೆಡಿಎಸ್‍ಗೆ ಅಧಿಕಾರ ನೀಡಿದರೆ ವಸತಿ, ಆರೋಗ್ಯ, ಶಿಕ್ಷಣ, ಕೃಷಿ, ನೀರಾವರಿ, ಮಹಿಳಾ ಹಾಗೂ ಯುವಜನ ಸಬಲೀಕರಣಕ್ಕೆ ಹಮ್ಮಿಕೊಳ್ಳಲಿರುವ ಕಾರ್ಯಕ್ರಮಗಳೇ ಪಂಚರತ್ನ ಯೋಜನೆಗಳಾಗಿವೆ. ಪಂಚರತ್ನ ಕಾರ್ಯಕ್ರಮದಲ್ಲಿ ಈ ಐದು ವಲಯಗಳಲ್ಲಿ ಜಾರಿಗೆ ತರಲಿರುವ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತ ನೀಡುವಂತೆ ಕೋರುವ ಮೂಲಕ ಚುನಾವಣೆ ಪ್ರಚಾರವನ್ನು ಆರಂಭಿಸಲಾಗುತ್ತದೆ.
ಬೆಂಗಳೂರಿನಲ್ಲಿ ಈಗಾಗಲೇ ಆರಂಭಿಸಿರುವ ಜನತಾ ಮಿತ್ರ ಕಾರ್ಯಕ್ರಮದ ಸಮಾರೋಪವನ್ನು ಸದ್ಯದಲ್ಲೇ ನೆರವೇರಿಸಲು ವರಿಷ್ಠರು ತೀರ್ಮಾನಿಸಿದ್ದಾರೆ.
ಪಂಚರತ್ನ ಕಾರ್ಯಕ್ರಮದಲ್ಲಿ ಸ್ಪರ್ಧೆಗಿಳಿಯಲಿ ರುವ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಸಂಸದರು, ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಸೇರಿದಂತೆ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದು, ಜಾನಪದ ಕಲಾತಂಡಗಳ ಪ್ರದರ್ಶನಗಳ ಮೂಲಕ ನಡೆಸಲು ಉದ್ದೇಶಿಸಲಾಗಿದೆ.