ನಾಳೆ ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ

Social Share

ಬೆಂಗಳೂರು, ನ.17- ಜೆಡಿಎಸ್ನ ಮೊದಲ ಹಂತದ ಪಂಚರತ್ನ ರಥಯಾತ್ರೆ ನಾಳೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಪ್ರಾರಂಭವಾಗಲಿದೆ. ನಾಳೆ ಪ್ರಾರಂಭವಾಗುವ ಪಂಚರತ್ನ ರಥಯಾತ್ರೆಯು ಡಿಸೆಂಬರ್ 27g ವರೆಗೆ ನಡೆಯಲಿದ್ದು, ಮೊದಲ ಹಂತದಲ್ಲಿ ಒಟ್ಟು 36 ದಿನಗಳ ಕಾಲ ಆರು ಜಿಲ್ಲೆಗಳ 34 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ.

ಪಂಚರತ್ನರಥ ಯಾತ್ರಯ ಹಿನ್ನಲೆಯಲ್ಲಿ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮುಳ ಬಾಗಿಲಿಗೆ ತೆರಳಲಿದ್ದಾರೆ. ಮಧ್ಯಾಹ್ನ ಮುಳಬಾಗಿಲುವಿನಲ್ಲಿ ಪಂಚರತ್ನ ರಥಯಾತ್ರೆಗೆ ಪಕ್ಷದ ನಾಯಕರು ಹಾಗೂ ಮುಖಂಡರ ಸಮ್ಮುಖದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಸಿರು ನಿಶಾನೆ ತೋರಲಿದ್ದಾರೆ.

ಬಳಿಕ ಬಹಿರಂಗ ಸಮಾವೇಶ ಹಮ್ಮಿಕೊಂಡಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಸಂಸದ ಪ್ರಜ್ವಲ್ ರೇವಣ್ಣ, ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕರು ಸೇರಿದಂತೆ ಪಕ್ಷದ ಎಲ್ಲಾ ನಾಯಕರು ಹಾಗೂ ಮುಖಂಡರು ಈ ಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಸಮಾವೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯ 90 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಸಂಭವನೀಯ ಅಭ್ಯರ್ಥಿಗಳಿಂದ ಪಕ್ಷಾಂತರ ಮಾಡುವುದಿಲ್ಲ ಎಂಬ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವೂ ಇದೆ ಎಂದು ಜೆಡಿಎಸ್ ಮೂಲಗಳು ಹೇಳಿವೆ.
ಈ ರಥಯಾತ್ರೆಗೆ 8 ವಾಹನಗಳನ್ನು ವಿಶೇಷವಾಗಿ ವಿನ್ಯಾಸ ಗೊಳಿಸಲಾಗಿದೆ.

ಮಳೆ ಅಡ್ಡಿಯಾದ ಹಿನ್ನೆಲೆ ಯಲ್ಲಿ ನ.1ರಂದು ನಡೆಯಬೇಕಿದ್ದ ಯಾತ್ರೆಯನ್ನು ಮುಂದೂಡಲಾಗಿತ್ತು. ಮತ್ತೆ ನ.14ರಂದು ಪ್ರಾರಂಭವಾಗಬೇಕಿದ್ದ ಈ ಯಾತ್ರೆಗೆ ಮಳೆಯ ಹಿನ್ನೆಲೆಯಲ್ಲಿ ಮತ್ತೆ ಮುಂದೂಡಲಾಗಿತ್ತು.

ಈಗ ಮಳೆ ಬಿಡುವು ಕೊಟ್ಟಿರುವ ಹಿನ್ನೆಲೆಯಲ್ಲಿ ನಾಳೆಯಿಂದದ ಪಂಚರತ್ನ ರಥಯಾತ್ರೆಗೆ ಮತ್ತೆ ಚಾಲನೆ ನೀಡಲಾಗುತ್ತದೆ. ಕೋಲಾರ ಜಿಲ್ಲೆಯ ಮಳಬಾಗಿಲು, ಬಂಗಾರಪೇಟೆ, ಮಾಲೂರು, ಕೋಲಾರ, ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರಗಳಲ್ಲಿ ನ.18ರಿಂದ ನ.22ರವರೆಗೆ ಯಾತ್ರೆ ನಡೆಯಲಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ನ.23ರಿಂದ ನ.27ರವರೆಗೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಕ್ಷೇತ್ರಗಳಲ್ಲಿ ನ.28ರಿಂದ ನ.30ರವರೆಗೆ ಯಾತ್ರೆ ಹಾಗೂ ಜನಸಂಪರ್ಕ ಸಭೆ ನಡೆಸಲಾಗುತ್ತದೆ.

ತುಮಕೂರು ಜಿಲ್ಲೆಯ ತುಮಕೂರು ನಗರ, ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಗುಬ್ಬಿ ಕ್ಷೇತ್ರಗಳಲ್ಲಿ ಡಿಸೆಂಬರ್ ಒಂದರಿಂದ ಡಿ.6ರವರೆಗೆ ಹಾಗೂ ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಕುಣಿಗಲ್ , ತುಮಕೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಡಿ.11 ರಿಂದ ಡಿ.14ರವರೆಗೆ ಯಾತ್ರೆ ಕೈಗೊಳ್ಳಲಾಗುತ್ತದೆ.

ರಾಮನಗರ ಜಿಲ್ಲೆಯ ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ ಕ್ಷೇತ್ರದಲ್ಲಿ ಡಿ.15ರಿಂದ ಡಿ.20ರವರೆಗೆ ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್.ಪೇಟೆ ಹಾಗೂ ನಾಗಮಂಗಲ ವಿಧಾನಸಭಾ ಕ್ಷೇತ್ರೆಗಳಲ್ಲಿ ಡಿ.21ರಿಂದ ಡಿ.27ರವರೆಗೆ ಪಂಚರತ್ನ ರಥಯಾತ್ರೆ ಹಾಗೂ ಜನಸಂಪರ್ಕ ಕಾರ್ಯಕ್ರಮ ಹಮ್ಮಿಕೊಲ್ಳಲಾಗಿದೆ ಎಂದು ಜೆಡಿಎಸ್ ಮೂಲಗಳು ಹೇಳಿವೆ.

2023ರ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲುವು ಸಾಸಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಬೇಕು ಎಂಬ ಗುರಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕುರುಡು ಮಲೆಯಿಂದ ಚುನಾವಣಾ ಪ್ರಚಾರ ವನ್ನು ಕೈಗೊಳ್ಳುತ್ತಿದ್ದಾರೆ. ಈ ರಥಯಾತ್ರೆ ಸಂದರ್ಭದಲ್ಲಿ ಗ್ರಾಮ ವಾಸ್ತವ್ಯ ಮಾಡಿ ಜನಾಭಿಪ್ರಾಯ ಸಂಗ್ರಹಿಸ ಲಿದ್ದಾರೆ. ಜತೆಗೆ ಪಂಚರತ್ನ ಯೋಜನೆಯ ಬಗ್ಗೆ ಜನ ಜಾಗೃತಿ ಮೂಡಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

#JDS, #Pancharatna, #Rathayatre,

Articles You Might Like

Share This Article